ಕಲ್ಕಿ ಭಗವಾನ್‍ಗೆ ಸೇರಿದ ಆಶ್ರಮಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ, 33 ಕೋಟಿ ವಶ..!

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ತೂರು/ಚೆನ್ನೈ, ಅ.17- ಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್‍ಗೆ ಸೇರಿದ ಆಶ್ರಮಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ಕರೆನ್ಸಿಗಳು ಸೇರಿದಂತೆ 33 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದ ಆಶ್ರಮಗಳು ಮತ್ತು ಕಚೇರಿಗಳು ಸೇರಿದಂತೆ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಈ ದಾಳಿ ವೇಳೆ ಭಾರೀ ಪ್ರಮಾಣದ ಅಕ್ರಮ, ಅವ್ಯವಹಾರಗಳು ಪತ್ತೆಯಾಗಿವೆ ಎಂದು ಐಟಿ ಇಲಾಖೆಯ ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ ಒಂದು ಸಾವಿರ ಎಕರೆ ಜಾಗಕ್ಕೆ ಸಂಬಂಧಪಟ್ಟಂತೆ ಯಾವುದೇ ಅಧಿಕೃತ ದಾಖಲೆಗಳು ಇಲ್ಲದ ಕಾರಣ ಈ ಭೂಮಿಯಲ್ಲೂ ಕೋಟ್ಯಂತರ ರೂ. ಅಕ್ರಮದ ಮಾಹಿತಿ ಲಭಿಸಿದೆ.  ದೇಶ ವಿದೇಶಗಳಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕಲ್ಕಿ ಭಗವಾನಗೆ ಸೇರಿದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆದಿದ್ದು, ಭಗವಾನ ಪುತ್ರ ಕೃಷ್ಣಾ ಮತ್ತು ಪತ್ನಿಯನ್ನು ಅಧಿಕಾರಿಗಳು ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಕಲ್ಕಿ ಭಗವಾನ್ ಆಶ್ರಮದಲ್ಲಿ ಹಲವು ಅವ್ಯವಹಾರ ನಡೆಯುತ್ತಿದೆ. ಭಕ್ತರಿಗೆ ಲೈಂಗಿಕ ಕಿರುಕುಳ, ಬೆದರಿಕೆ ಒಡ್ಡಿದ್ದ ಆರೋಪಗಳು ಕೇಳಿಬಂದಿದ್ದವು ಆಶ್ರಮ ಸುತ್ತಮುತ್ತ ನೂರಾರು ಕೋಟಿ ಮೌಲ್ಯದ ಅಕ್ರಮ ಆಸ್ತಿಗಳು, ಬೇನಾಮಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಖರೀದಿಸಲಾಗಿದೆ ಎನ್ನುವ ಆಪಾದನೆಗಳು ಇದ್ದವು. ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹಲವು ಕಡೆ ಆಶ್ರಮ ಕಡೆ ಸ್ಥಾಪಿಸಿದ್ದ. ಈತನಿಗೆ ಅನಿವಾಸಿ ಭಾರತೀಯರು ಮತ್ತು ದೊಡ್ಡ ದೊಡ್ಡ ಉದ್ಯಮಿಗಳು ಭಕ್ತರಿದ್ದಾರೆ. ಭಕ್ತರು ಆಶ್ರಮಕ್ಕೆ ನೀಡಿದ ದೇಣಿಗೆ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ. ಭಾರೀ ತೆರಿಗೆ ವಂಚನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.

ಕಲ್ಕಿ ಭಗವಾನ್ ಪುತ್ರ ಕೃಷ್ಣಾ ವಿವಿಧ ಉದ್ಯಮಗಳಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು ಲೆಕ್ಕ ಪತ್ರದಲ್ಲಿ ಗೋಲ್‍ಮಾಲ್ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

Facebook Comments