ಡಿಸಿಪಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.2- ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ವಿಭಾಗದ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಕೋವಿಡ್ ನಿಯಮ ಪಾಲಿಸದೆ ಜನರು ಮಾರುಕಟ್ಟೆ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತೆಗೆದುಕೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆಯುಕ್ತರು ಚರ್ಚಿಸಿದರು. ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ ಕಂಟಕ ಎದುರಾಗಲಿದೆಯೇ ಎಂಬ ಭೀತಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನದಟ್ಟಣೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಆಯುಕ್ತರು ಸಭೆ ನಡೆಸಿ ಪೊಲೀಸರಿಗೆ ಸಲಹೆ ಸೂಚನೆ ನೀಡಿದರು.

ಆಷಾಢ ಮಾಸ ಮುಗಿಯುತ್ತಿದ್ದಂತೆ ಶ್ರಾವಣ ಆರಂಭವಾಗಲಿದ್ದು, ಹಬ್ಬ, ಮದುವೆ, ಸಭೆಸಮಾರಂಭಗಳು ಹೆಚ್ಚಾಗಿ ನಡೆಯುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಗಳಿಗೆ ಜನ ಸೇರುವುದನ್ನು ನಿಯಂತ್ರಿಸುವ ಬಗ್ಗೆಯೂ ಸಹ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

Facebook Comments