BIG NEWS : ಡಿ.5ರಂದು ಕರ್ನಾಟಕ ಬಂದ್‍..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.17- ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು ನ.27ರೊಳಗೆ ಹಿಂತೆಗೆದುಕೊಳ್ಳದಿದ್ದರೆ ಡಿ.5ರಂದು ಅಖಿಲ ಕರ್ನಾಟಕ ಬಂದ್‍ಗೆ ಕರೆ ನೀಡುವುದಾಗಿ ಎಚ್ಚರಿಸಿವೆ. ಪ್ರಾಧಿಕಾರ ರಚನೆ ವಿರೋಧಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್,

ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಮಂಜುನಾಥ್ ದೇವು, ಗಿರೀಶ್ ಕುಮಾರ್, ಶಿವರಾಮೇಗೌಡ, ಪಾಲನೇತ್ರ, ಪ್ರವೀಣ್‍ಕುಮಾರ್ ಶೆಟ್ಟಿ ಮುಂತಾದ ಮುಖಂಡರ ನೇತೃತ್ವದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಕ್ರಮ ಖಂಡಿಸಿದರಲ್ಲದೆ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಡಿ.5ರಂದು ಬಂದ್ ನಡೆಸುವುದಾಗಿ ಹೇಳಿವೆ.

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದರು. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರು, ರೈತ ಮುಖಂಡರು, ಮಹಿಳಾ ಮುಖಂಡರೊಂದಿಗೆ ಸಭೆ ನಡೆಸಿ ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತೇವೆ.

ಸರ್ಕಾರಕ್ಕೆ ನ.27ರ ವರೆಗೆ ಗಡುವು ನೀಡುತ್ತೇವೆ. ಅಷ್ಟರೊಳಗೆ ಪ್ರಾಧಿಕಾರದಿಂದ ಹಿಂದೆ ಸರಿಯದಿದ್ದರೆ ಡಿ.5ರಂದು ರಾಜ್ಯ ಬಂದ್ ಮಾಡಿ ಕನ್ನಡಿಗರ ಸಾಮಥ್ರ್ಯ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ಸರ್ಕಾರ ಕೇವಲ 5 ಕೋಟಿ ಅನುದಾನ ನೀಡಿದೆ. ಆದರೆ, ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಿದೆ.

ಕೇವಲ ಉಪಚುನಾವಣೆಗಾಗಿ ಈ ರೀತಿ ಮರಾಠಿಗರನ್ನು ಓಲೈಸುವ ಹುನ್ನಾರ ನಡೆಸಿದೆ ಎಂದು ಅವರು ಆರೋಪಿಸಿದರು.  ಈಗ ಮರಾಠ ಅಭಿವೃದ್ಧಿ ಪ್ರಾಧಿಕಾರ, ಮುಂದೆ ತಮಿಳು, ತೆಲುಗು, ಮಲಯಾಳಂ ಹೀಗೆ ಅನ್ಯ ರಾಜ್ಯಗಳ ಎಲ್ಲ ನಿವಾಸಿಗಳಿಗೂ ಅಭಿವೃದ್ಧಿ ಪ್ರಾಧಿಕಾರ ಮಾಡಿ ಕನ್ನಡಿಗರನ್ನು ಸರ್ಕಾರ ಅನಾಥರನ್ನಾಗಿ ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದೆ. ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲ. ಅವರ ಹಿತ ಕಾಯುವುದು ಬಿಟ್ಟು ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಹಾಸ್ಯಾಸ್ಪದವಾಗಿದೆ. ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಉಗ್ರ ಹೋರಾಟ ಮಾಡುತ್ತೇವೆ. ಸರ್ಕಾರದ ನಾಡವಿರೋಧಿ ಧೋರಣೆಯನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

Facebook Comments