ಕರ್ನಾಟಕ ಬಂದ್ (Live)

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.28- ಅನ್ನದಾತರ ಆಕ್ರೋಶ ಮುಗಿಲು ಮುಟ್ಟಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಮತ್ತು ಕಾರ್ಮಿಕ ವಿರೋ ಕಾಯ್ದೆಗಳನ್ನು ಖಂಡಿಸಿ ಇಂದು ರೈತ ಹಾಗೂ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಬಹುತೇಕ ಯಶಸ್ವಿಯಾಯಿತು.

ರಾಜಧಾನಿ ಬೆಂಗಳೂರು, ಮಂಡ್ಯ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ರಾಮನಗರ, ಕೋಲಾರ, ರಾಯಚೂರು, ಬೀದರ್,ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾದರೆ, ಚಾಮರಾಜನಗರ, ಮೈಸೂರು, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

# ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿದರೆ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ರಸ್ತೆ ತಡೆ, ಧರಣಿ, ಪ್ರತಿಭಟನೆ ನಡೆಸಿದವು. ಹಲವೆಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.  ಬೆಂಗಳೂರಿನ ಟೌನ್‍ಹಾಲ್ ಬಳಿ ಕನ್ನಡಪರ ಹೋರಾಟಗಾರರು, ಕನ್ನಡಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಉರುಳುಸೇವೆ ಮಾಡಿದರು. ಅಲ್ಲದೆ, ಬೃಹತ್ ಗಾತ್ರದ ನೇಗಿಲು ಹೊತ್ತು ರೈತಪರ ಘೋಷಣೆಗಳನ್ನು ಕೂಗಿದರು. ಗದಗದಲ್ಲಿ ರೈತರು ತಲೆ ಮೇಲೆ ಕಲ್ಲು ಹೊತ್ತು ಬಾಯಿ ಬಡಿದುಕೊಂಡು ತಮ್ಮ ಆಕ್ರೋಶ ಹೊರಹಾಕಿದರು.

# ರೈತರಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ರೈತರು ಅರೆಬೆತ್ತಲೆ ಮೆರವಣಿಗೆ ಮಾಡಿದರು. ಮಂಡ್ಯದಲ್ಲಿ ಬೈಕ್ ರ್ಯಾಲಿ ನಡೆಸಿ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿಗೌಡ ನೇತೃತ್ವದಲ್ಲಿ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

# ಸುಮ್ಮನಹಳ್ಳಿ ಜಂಕ್ಷನ್‍ನಲ್ಲಿ ಕಬ್ಬು ಬೆಳೆಗಾರರ ಹೋರಾಟಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಲ್ಲಿಂದ ಮೆರವಣಿಗೆ ಮೂಲಕ ಟೌನ್‍ಹಾಲ್‍ಗೆ ಜಾಥಾ ಮಾಡಲಾಯಿತು.  ಮೌರ್ಯ ವೃತ್ತದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಧರಣಿ ನಡೆಸಿ ಅಲ್ಲಿಂದ ಟೌನ್‍ಹಾಲ್‍ಗೆ ಮೆರವಣಿಗೆ ಮೂಲಕ ಸಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಲಾಯಿತು.

# ರೈತ, ಕಾರ್ಮಿಕ, ದಲಿತ ಸಂಘಟನೆಗಳು ಸೇರಿದಂತೆ 32ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳ ಐಕ್ಯ ಸಮಿತಿ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಮುಂತಾದ ಮುಖಂಡರ ನೇತೃತ್ವದಲ್ಲಿ ಬೃಹತ್ ರ್ಯಾಲಿ ನಡೆಸಿ ರೈತ ಶಕ್ತಿಯನ್ನು ಪ್ರದರ್ಶನ ಮಾಡಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯ ಮಾಡಲಾಯಿತು.

# ಇತ್ತ ಮೆಜೆಸ್ಟಿಕ್‍ನಲ್ಲಿ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಒಕ್ಕೂಟದ ಮುಖಂಡರಾದ ಸಾ.ರಾ.ಗೋವಿಂದು, ಮಂಜುನಾಥ್ ದೇವು, ಗಿರೀಶ್ ಗೌಡ ಮುಂತಾದವರು ಪ್ರತಿಭಟನೆ ನಡೆಸಿ ಕೃಷಿಕರಿಗೆ ಮಾರಕವಾದ ಕಾಯ್ದೆಗಳನ್ನು ಕೂಡಲೇ ಹಿಂಪಡೆಯದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

# ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಾರಾಯಣಗೌಡ ನೇತೃತ್ವದಲ್ಲಿ ರೈಲ್ವೆ ಸ್ಟೇಷನ್‍ಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಪೊಲೀಸರು ಕಾರ್ಯಕರ್ತರನ್ನು ರೈಲ್ವೆ ನಿಲ್ದಾಣದ ಒಳಗೆ ಬಿಡದೆ ತಡೆದು ಹಲವರನ್ನು ತಮ್ಮ ವಶಕ್ಕೆ ಪಡೆದರು.
ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಎಂದಿನಂತೆ ಸಂಚರಿಸಿದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಅಂಗಡಿ-ಮುಂಗಟ್ಟುಗಳು, ಹೊಟೇಲ್‍ಗಳು ಬಹುತೇಕ ತೆರೆದಿದ್ದವು. ಆಟೋ, ಟ್ಯಾಕ್ಸಿ, ಲಾರಿ ಮಾಲೀಕರ ಸಂಘದವರು ಬಂದ್‍ಗೆ ಬೆಂಬಲ ನೀಡಿದ್ದರಿಂದ ಟ್ಯಾಕ್ಸಿಗಳು ರಸ್ತೆಗಿಳಿಯಲಿಲ್ಲ.

# ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಇದು ಸಾಂಕೇತಿಕ ಪ್ರತಿಭಟನೆ ಅಷ್ಟೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೊಟೇಲ್ ಉದ್ಯಮದವರು ನಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕಿತ್ತು. ನಾವು ಬೆಳೆದ ಅನ್ನ ಮಾರಿ ಬದುಕುತ್ತಿರುವ ನೀವು ನಮಗೆ ಬೆಂಬಲ ನೀಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

# ಕೃಷಿಗೆ ಮಾರಕವಾದ ರೈತರಿಗೆ ಮರಣಶಾಸನವಾದ ಈ ಕಾಯ್ದೆಗಳನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.  ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋ ಧೋರಣೆ ಖಂಡಿಸಿದರು. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಈ ಬಂದ್ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

Facebook Comments

Sri Raghav

Admin