ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಸಿ.ಎಸ್‍.ಷಡಕ್ಷರಿ ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.8-ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಸಿ.ಎಸ್‍.ಷಡಕ್ಷರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಕಬ್ಬನ್‍ಪಾರ್ಕ್‍ನಲ್ಲಿರುವ ರಾಜ್ಯ ಸರ್ಕಾರಿ ನೌಕರರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಿತೈಷಿಗಳು ಹಾಗೂ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ನಿಕಟಪೂರ್ವ ಅಧ್ಯಕ್ಷ ಎಚ್.ಕೆ.ರಾಮು ನೂತನ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ವೇಳೆ ನೂತನ ಅಧ್ಯಕ್ಷರು ಮತ್ತು ಖಜಾಂಚಿಯವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ನಿನ್ನೆ ನಡೆದ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸಿ.ಎಸ್.ಷಡಕ್ಷರಿ ಅವರು 256 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಎಚ್.ಕೆ.ರಾಮು ಅವರನ್ನು ಪರಾಭವಗೊಳಿಸಿದ್ದರು.

ಈ ಹಿಂದೆ ಷಡಕ್ಷರಿ ಅವರು ಶಿವಮೊಗ್ಗ ಘಟಕದ ಅಧ್ಯಕ್ಷರಾಗಿಯೂ ಮತ್ತು ಕೇಂದ್ರ ಸಮಿತಿಯಲ್ಲಿ ನಿಕಟಪೂರ್ವ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಲೆಕ್ಕಪತ್ರ ಇಲಾಖೆಯ ನೌಕರರಾದ ಅವರು ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ ವಿಶೇಷ ಕರ್ತವ್ಯ ಅಧಿಕಾರಿಯಾಗಿ(ಒಎಸ್‍ಡಿ)ಯೂ ಸೇವೆ ಸಲ್ಲಿಸಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಷಡಕ್ಷರಿ ಅವರು ಪ್ರಧಾನ ಕಾರ್ಯದರ್ಶಿ ಮತ್ತಿತರ ಪದಾಧಿಕಾರಿಗಳನ್ನು ನೇಮಕ ಮಾಡಲಿದ್ದಾರೆ.

ಅಭಿನಂದನೆ:
ರಾಜ್ಯ ಸರ್ಕಾರಿ ಸಂಘ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ.ಎಸ್.ಷಡಕ್ಷರಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

Facebook Comments

Sri Raghav

Admin