ಶಂಕಿತ ಉಗ್ರನ ಬಂಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಣೆ..!

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ,ಜೂ 27- ರಾಜ್ಯದಲ್ಲಿ ಶಂಕಿತ ಉಗ್ರನ ಬಂಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಮಾಡಲಾಗಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ಶಂಕಿತ ಉಗ್ರನ ಬಂಧಿಸಿರುವ ಹಿನ್ನೆಲೆಯಲ್ಲಿ ನಿನ್ನೆ ಸಿಐಡಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಮಾಡಲಾಗಿದೆ ಎಂದರು.

ರಾಮನಗರದಲ್ಲಿ ಬಾಂಬ್ ಪತ್ತೆ ಪ್ರಕರಣ ಎನ್‍ಐಎ ತನಿಖೆ ವ್ಯಾಪ್ತಿಗೆ ಬರುವುದರಿಂದ ನಾವು ಏನೂ ಹೇಳಲು ಆಗುವುದಿಲ್ಲ. ಅವರಿಗೆ ಸಹಕಾರ ನೀಡುವುದು ಮಾತ್ರ ನಮ್ಮ ಕೆಲಸ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಎನ್‍ಐಎ ಅವರು ಕೇಳಿದಂತೆ ಅವರಿಗೆ ಕಚೇರಿ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ತನಿಖೆ ವೇಳೆ ಅವರು ಕೇಳಿದ ಸೌಲಭ್ಯ ನೀಡುವುದು ಮಾತ್ರ ನಮ್ಮ ಕೆಲಸ. ಎನ್‍ಐಎ ನಿರ್ದೇಶನ, ಸೂಚನೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತದೆ. ಎನ್‍ಐಎ ಕೇಂದ್ರ ಸರ್ಕಾರದಡಿ ಬರುತ್ತದೆ. ಅವರೇ ತನಿಖೆ ಮಾಡುತ್ತಾರೆ. ನಮ್ಮ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಏನೂ ಹೇಳಲು ಆಗದು ಎಂದು ತಿಳಿಸಿದರು.

ಔರಾದ್ಕರ್ ವರದಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಪೊಲೀಸರಿಗೆ ಸಿಹಿ ಸುದ್ದಿ ನೀಡುತ್ತೇವೆ ಎಂದು ತಿಳಿಸಿದರು. ಜಿಂದಾಲ್‍ಗೆ ಭೂಮಿ ಪರಭಾರೆ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಸಂಪುಟ ಉಪ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಸಂಬಂಧ ಬೆಂಗಳೂರಿಗೆ ಬಂದ ಮೇಲೆ ಮೊದಲ ಸಭೆ ನಡೆಸುತ್ತೇನೆ.

ಸಂಪುಟ ಉಪ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಿ ನಿರ್ಣಯಿಸುತ್ತೇವೆ ಎಂದು ಹೇಳಿದರು. ನಿನ್ನೆ ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿಯವರಿಗೆ ಅಸೂಯೆಯಿದೆ. ಇದು ಸರಿಯಲ್ಲ ಎಂದರು.

ಕಾನೂನು ಸುವ್ಯವಸ್ಥೆ ಬಗ್ಗೆ ಹೈಕೋರ್ಟ್ ಅಸಮಾಧಾನಗೊಂಡಿರುವ ವಿಚಾರ ಗಮನಕ್ಕೆ ಬಂದಿದೆ. ನ್ಯಾಯಾಲಯದ ಟಿಪ್ಪಣಿಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin