ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ16-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಹೆಚ್ಚಿನ ರೀತಿ ಉಂಟಾಗುವುದಿಲ್ಲ. ಆದರೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಅಂಫಾನ್ ಎಂಬ ಹೆಸರಿನ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದು, ಅದು ಓಡಿಸ್ಸಾ ಹಾಗೂ ಪಶ್ಚಿಮ ಬಂಗಾಳದ ಕಡೆ ಚಲುಸುತ್ತಿರುವುದರಿಂದ ರಾಜ್ಯಕ್ಕೆ ಹೆಚ್ಚಿನ ರೀತಿಯ ಪರಿಣಾಮ ಇರುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.

ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ನಾಳೆಯಿಂದ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನೂ ಎರಡು ದಿನ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.

ರಾಜ್ಯದ ಉತ್ತರ ಒಳನಾಡಿನ ಕೆಲವು ಜಲ್ಲೆಗಳಲ್ಲೂ ಸಾಧಾರ ಪ್ರಮಾಣದ ಮಳೆಯಾಗಬಹುದು. ರಾಜ್ಯದಲ್ಲಿ ಈ ತಿಂಗಳ ಆರಂಭದಿಂದಲೂ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ.

ಇನ್ನು ಮುಂದೆಯೂ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ. ಆದರೆ, ವ್ಯಾಪಕ ಪ್ರಮಾಣದಲ್ಲಿ ಎಲ್ಲೆಡೆ ಮಳೆಯಾಗುವುದಿಲ್ಲ. ಚಂಡಮಾರುತದ ಪರಿಣಾಮ ನೇರವಾಗಿ ರಾಜ್ಯದ ಮೇಲೆ ಆಗದಿದ್ದರೂ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಒಂದೆರಡು ದಿನ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಅವರು ತಿಳಿಸಿದರು.

Facebook Comments

Sri Raghav

Admin