ಅಪಾಯ ಮಟ್ಟ ಮೀರಿದ ನದಿಗಳು, ಕರುನಾಡಲ್ಲಿ ಮತ್ತೆ ಮಹಾ ಪ್ರವಾಹ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.17-ಉತ್ತರ ಕರ್ನಾಟಕದಲ್ಲಿ ಮತ್ತೆ ಮಳೆಯಬ್ಬರಕ್ಕೆ ಜನಜೀವನ ಅಕ್ಷರಶಃ ನಲುಗಿಹೋಗಿದೆ. ಮಲೆನಾಡು, ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೋವಿಡ್-19ನಿಂದ ತತ್ತರಿಸುತ್ತಿದ್ದ ಜನರು ಪ್ರವಾಹದ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಕೃಷ್ಣ, ವೇದಗಂಗಾ, ದೂದ್‍ಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಾಭದ್ರ ನದಿಗಳು ತುಂಬಿ ಹರಿಯುತ್ತಿರುವುದರಿಂದ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹರಿಬಿಡಲಾಗುತ್ತಿದೆ.

ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಅತ್ತ ಮಹಾರಾಷ್ಟ್ರದಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣ ನದಿ ಪಾತ್ರಕ್ಕೂ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಈ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಕಳೆದ ಬಾರಿ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಇನ್ನೂ ಜನ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಪ್ರವಾಹದ ಛಾಯೆ ಆವರಿಸಿದ್ದು ಜನರನ್ನು ಭಯಭೀತಗೊಳಿಸಿದೆ.

ತಮ್ಮ ಜಾನುವಾರುಗಳು, ಮಕ್ಕಳು, ಸರಕು ಸಾಮಾನುಗಳನ್ನು ರಕ್ಷಣೆ ಮಾಡಿಕೊಳ್ಳುವಲ್ಲಿ ಬೇರೆಡೆ ಸ್ಥಳಾಂತರ ಮಾಡುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಿ ಅವರಿಗೆ ಅಗತ್ಯ ನೆರವು, ಜಾನುವಾರುಗಳಿಗೆ ಮೇವು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸುವಲ್ಲಿ ಜಿಲ್ಲಾಡಳಿತ ಮುಂದಾಗಿದೆ.

ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಹಾವೇರಿ, ವಿಜಯಪುರ, ಯಾದಗಿರಿ, ಬಾಗಲಕೋಟೆ ಸೇರಿದಂತೆ 9 ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ನದಿಗಳು, ಉಪ ನದಿಗಳು, ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಲಕ್ಷಾಂತರ ಎಕರೆಯಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತಗೊಂಡಿದೆ.

ಬಾಗಲಕೋಟೆ, ಚಿಕ್ಕೋಡಿ, ಯಾದಗಿರಿ ಮುಂತಾದೆಡೆ ಹಲವು ಸೇತುವೆಗಳ ತುಂಬೆಲ್ಲಾ ನೀರು ಹರಿಯುತ್ತಿದ್ದು ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

# ಹುಬ್ಬಳ್ಳಿ-ಧಾರವಾಡ ಜಿಲ್ಲೆ ಹಲವೆಡೆ ಪ್ರವಾಹ ಭೀತಿ:
ಧಾರವಾಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಸೇತುವೆ, ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳ ಕೊಳ್ಳಗಳು ಉಕ್ಕಿ ಹರಿಯತೊಡಗಿದ್ದು, ಹಲವು ಕಡೆ ಪ್ರವಾಹ ಭೀತಿ ಉಂಟಾಗಿದೆ.

ತುಪ್ಪರಿ ಹಳ್ಳದ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದ್ದು, ಧಾರವಾಡ ತಾಲೂಕಿನ ಹಾರೋಬೆಳವಡಿಯ ಸೇತುವೆ ಮೇಲೆ ಹರಿಯುತ್ತಿದೆ. ಇದರಿಂದ ಧಾರವಾಡ-ಸವದತ್ತಿ ನೇರ ಸಂಪರ್ಕ ಕಡಿತವಾಗಿದೆ.

# ಕಂಬಾರಗಣವಿ ಸೇತುವೆ ಮುಳುಗಡೆ:
ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಕಂಬಾರಗಣವಿ ಸೇತುವೆ ಮುಳುಗಡೆಯಾದ ಪರಿಣಾಮ ಗ್ರಾಮದ ಸಂಪರ್ಕ ಕಡಿತಗೊಂಡಿದೆ.

# ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ:
ರಾಯಚೂರು ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಾರಾಯಣಪುರದ ಬಸವಸಾಗರ ಜಲಾಶಯದಿಂದ ನದಿಗೆ 2.60 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಜಲಾಶಯಕ್ಕೆ 2.20 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಎರಡು ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ. ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಕಡದರಗಡ್ಡಿ, ಎಳಗುಂದಿ ಸೇರಿ ಎಂಟು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ.

ದೇವದುರ್ಗ ತಾಲೂಕಿನ ಹೂವಿನ ಹೆಡಗಿ ಸೇತುವೆಯೂ ಮುಳುಗಡೆಯಾಗಿದ್ದು, ದೇವದುರ್ಗ ಕಲಬುರ್ಗಿ ರಾಜ್ಯ ಹೆದ್ದಾರಿ ಮಾರ್ಗ ಕಡಿತವಾಗಿದೆ. ಇನ್ನೂ ದೇವದುರ್ಗ ತಾಲೂಕಿನ ಕೊಪ್ಪರದ ಐತಿಹಾಸಿಕ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಜಲಾವೃತವಾಗಿದೆ.

# ಘಟಪ್ರಭಾ, ಮಲಪ್ರಭಾ ಅಪಾಯ ಮಟ್ಟ:
ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವ ಹಿನ್ನೆಲೆ ನದಿ ತೀರದ 34 ಹಳ್ಳಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಇನ್ನೊಂದೆಡೆ ಕೃಷ್ಣಾ ನದಿಯ ನೀರಿನ ಮಟ್ಟ 4 ಅಡಿಗಳಷ್ಟು ಹೆಚ್ಚಾಗಿದ್ದು, ರಾಜ್ಯ ಹೆದ್ದಾರಿಯ ಕುಡಚಿ-ಉಗಾರ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಲೇ ಇದೆ. ಹೀಗಾಗಿ ನದಿ ಪಾತ್ರದ ಜನತೆ ತೀವ್ರ ಆತಂಕಗೊಂಡಿದ್ದಾರೆ.

# ಆರೆಂಜ್ ಅಲರ್ಟ್:
ಭಾರೀ ಮಳೆ ಹಿನ್ನೆಲೆಯಲ್ಲಿ ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ನವಿಲು ತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿರುವ ಮನೆ, ಅಂಗಡಿಗಳು ಜಲಾವೃತಗೊಂಡಿವೆ. ಎಂಕೆ ಹುಬ್ಬಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಮಾರಿಹಾಳದಲ್ಲಿ ರಸ್ತೆಯ ಬದಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ರಸ್ತೆ ಬಂದ್ ಆಗಿದೆ.

ಹಿಡಕಲ್ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವ ಕಾರಣ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಮುಧೋಳ ತಾಲೂಕಿನ ಮಾಚಕನೂರಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

# ತುಂಗಾಭದ್ರದಿಂದ ಭಾರೀ ಪ್ರಮಾಣದ ನೀರು:
ತುಂಗಾಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ನಿಂದ 4,539 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಹಾಲ್ನೊರೆಯಂತೆ ಉಕ್ಕುತ್ತಿರುವ ನೀರು ಬಣ್ಣದ ಬೆಳಕಿನಲ್ಲಿ ಚಿತ್ತಾರ ಮೂಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿರುವ ಜಲಾಶಯದ ಭರ್ತಿಗೆ ಅರ್ಧ ಅಡಿಯಷ್ಟೇ ಬಾಕಿ ಇದ್ದು, 1632 ಅಡಿಯಷ್ಟು ನೀರು ಸಂಗ್ರಹಗೊಂಡಿದೆ.

ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂನಿಂದ 2 ಲಕ್ಷ 37 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲೂ ಮಳೆ ಆಗುತ್ತಿದೆ. ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೆಜ್‍ನಿಂದ ಭೀಮ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಗದಗ ಜಿಲ್ಲೆಯಲ್ಲೂ ಪ್ರವಾಹ ಭೀತಿ ಉಂಟಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಮಳೆ ಆಗ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜಧಾನಿ ಬೆಂಗಳೂರಲ್ಲೂ ಮೂರು ದಿನ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

Facebook Comments

Sri Raghav

Admin