ಗುಟ್ಟು ಬಿಟ್ಟುಕೊಡದ ದೇವೇಗೌಡರು, ಕುತೂಹಲ ಕೆರಳಿಸಿದ ರಾಜ್ಯಸಭೆ ಚುನಾವಣೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.7- ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ.

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಬೇಕೆಂಬ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ, ದೇವೇಗೌಡರ ಮೇಲೆ ಸ್ಪರ್ಧಿಸುವಂತೆ ಒತ್ತಡವನ್ನೂ ಹೇರಲಾಗುತ್ತಿದೆ. ಆದರೂ ಈತನಕ ಗೌಡರು ತಮ್ಮ ನಿರ್ಧಾರವನ್ನು ಪ್ರಕಟಿಸಿಲ್ಲ.

ನಾಳೆ ಸಂಜೆಯೊಳಗೆ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗೌಡರು ತಮ್ಮ ನಿಲುವನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಕೊನೆ ಗಳಿಗೆಯಲ್ಲಿ ದೇವೇಗೌಡರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಒಂದು ವೇಳೆ ಒತ್ತಡಕ್ಕೆ ಮಣಿದು ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷ ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಇದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 9ರಂದು ಕಡೆಯ ದಿನವಾಗಿದೆ. ಕಡೆಯ ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ.

ಕಾಂಗ್ರೆಸ್ ಪಕ್ಷ ಈಗಾಗಲೇ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡುವ ಅಂತಿಮ ಘಟ್ಟ ತಲುಪಿದೆ.

ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ 2, ಕಾಂಗ್ರೆಸ್ 1 ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಒಂದು ವೇಳೆ ಬಿಜೆಪಿ 3ನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮತದಾನ ನಡೆಯಲಿದೆ.

34 ಶಾಸಕರನ್ನು ಹೊಂದಿರುವ ಜೆಡಿಎಸ್‍ಗೆ ಕಾಂಗ್ರೆಸ್ ಸೇರಿದಂತೆ ಇತರೆ ಶಾಸಕರ ಬೆಂಬಲ ಪಡೆಯುವುದು ಅನಿವಾರ್ಯವಾಗಲಿದೆ. ಹೀಗಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರೂ ರಾಜಕೀಯ ಪಕ್ಷಗಳು ಅವಲೋಕಿಸುತ್ತಿವೆ.

Facebook Comments