ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ : ಸಚಿವ ನಾರಾಯಣಗೌಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.11- ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿಯಾಗಲಿವೆ. ಕ್ರೀಡೆಗಳ ಮೂಲಕ ದೇಶ-ವಿದೇಶದಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತಾಗಲಿ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಇಂದಿಲ್ಲಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೆಂಗಳೂರು ನಗರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನೌಕರರು ಒತ್ತಡದಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಅವರ ಒತ್ತಡ ನಿವಾರಣೆಗೆ ಕ್ರೀಡೆಗಳು ಸ್ಫೂರ್ತಿಯಾಗಲಿವೆ. ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ ಎಂದು ಹೇಳಿದರು. ಪ್ರತಿ ಜಿಲ್ಲೆಗೆ ಈ ಹಿಂದೆ 30 ಸಾವಿರ ಅನುದಾನ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಬಂದ ಮೇಲೆ ಒಂದೂವರೆ ಲಕ್ಷ ಅನುದಾನ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯವನ್ನು ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸ್ಥಾನದತ್ತ ಕೊಂಡೊಯ್ಯುವ ಕೆಲಸ ಮಾಡೋಣ. 2 ಕೋಟಿ ಅನುದಾನ ನೀಡುವ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ ಅವರು, ಮುಂದಿನ ಬಜೆಟ್‍ನಲ್ಲಿ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಪಡೆಯುವ ಮೂಲಕ ಕ್ರೀಡಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು.

ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕು. ತಾಲ್ಲೂಕು ಮಟ್ಟದಲ್ಲಿ ತರಬೇತುದಾರರನ್ನು ತಯಾರು ಮಾಡಬೇಕಾದ ಅಗತ್ಯವಿದೆ. ಈ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ನಗರ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಮಚಂದ್ರಪ್ಪ, ನೌಕರರ ಸಂಘದ ಪದಾಧಿಕಾರಿಗಳು, ನಗರ ಜಿಪಂ ಕಾರ್ಯನಿರ್ವಹಣಾಧಿಕಾರಿ ಕೆ.ಶಿವರಾಮೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Facebook Comments