ಕೆಂಗಲ್ ಹನುಮಂತಯ್ಯನವರ 112ನೇ ಜನ್ಮದಿನಾಚರಣೆ : ಸಿಎಂ ಪುಷ್ಪ ನಮನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯನವರ ತತ್ವ ಸಿದ್ಧಾಂತಗಳು ಎಲ್ಲರಿಗೂ ಆದರ್ಶಪ್ರಾಯವಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕೆಂಗಲ್ ಹನುಮಂತಯ್ಯನವರ 112ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗೆ ಪುಷ್ಪ ನಮನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಮಾತನಾಡಿದರು.

ರಾಜ್ಯ ಕಂಡ ಮುತ್ಸದ್ಧಿ ರಾಜಕಾರಣಿಗಳಲ್ಲಿ ಕೆಂಗಲ್ ಹನುಮಂತಯ್ಯ ನವರು ಒಬ್ಬರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ರೈಲ್ವೆ ಸಚಿವರಾಗಿ ರಾಜ್ಯ ಹಾಗೂ ರಾಷ್ಟ್ರಕ್ಕೆ ನೀಡಿರುವ ಅವರ ಕೊಡುಗೆ ಸ್ಮರಣೀಯವಾಗಿದೆ ಎಂದರು. ಆಡಳಿತದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧ ಹನುಮಂತಯ್ಯನವರ ಕನಸು. ಅವರು ಬದುಕು, ಆದರ್ಶಗಳು ಎಂದಿಗೂ ಪ್ರಸ್ತುತವಾಗಿವೆ. ಕೆಂಗಲ್ ಹನುಮಂತಯ್ಯನವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆಯಬೇಕಿದೆ ಎಂದು ಹೇಳಿದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ವಿಧಾನಸೌಧವನ್ನು ರಾಜ್ಯಕ್ಕೆ ಕೊಟ್ಟವರು ಕೆಂಗಲ್ ಹನುಮಂತಯ್ಯನವರು. ವಿಧಾನಸೌಧ ನಿರ್ಮಾಣದ ವೇಳೆಯೇ ಕೆಂಗಲ್ ಹನುಮಂತಯ್ಯನವರ ವಿರುದ್ಧ ಕೆಲವು ಆರೋಪಗಳು ಕೇಳಿ ಬಂದಿದ್ದವು. ಆದರೂ ಸುಂದರವಾದ ವಿಧಾನಸೌಧವನ್ನು ನಾಡಿಗೆ ನೀಡಿದ್ದಾರೆ ಎಂದರು.

ಉಪಮುಖ್ಯುಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯ್‍ಭಾಸ್ಕರ್, ಕೆಂಗಲ್ ಹನುಮಂತಯ್ಯ ಮೊಮ್ಮಗ ಶ್ರೀಪಾದರೇಣು ಮತ್ತಿತರರು ಉಪಸ್ಥಿತರಿದ್ದರು.

Facebook Comments