BREAKING : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಮುನ್ಸೂಚನೆ ಕೊಟ್ಟ ಸಚಿವ ಸುಧಾಕರ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.11-ರಾಜ್ಯದ ಜನತೆ ತಕ್ಷಣವೇ ಎಚ್ಚೆತ್ತುಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್‍ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಬಾರದೆಂದರೆ ಮೊದಲು ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಸರ್ಕಾರ ಅನಿವಾರ್ಯವಾಗಿ ಲಾಕ್‍ಡೌನ್‍ನಂತಹ ನಿಯಮಗಳನ್ನು ಜಾರಿ ಮಾಡಲೇಬೇಕಾಗುತ್ತದೆ ಎಂಬ ಸುಳಿವು ನೀಡಿದರು.

ಮಹಾರಾಷ್ಟ್ರದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲನೆ ಮಾಡದ ಕಾರಣ ಶುಕ್ರವಾರದಿಂದ ಸೋಮವಾರದವರಗೆ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಅಲ್ಲಿ ಒಂದೇ ಒಂದೂ ವಾಹನ ಸಂಚಾರಕ್ಕೂ ಅವಕಾಶ ಕೊಟ್ಟಿಲ್ಲ. ನಿಮ್ಮನ್ನು ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಅದೇ ರೀತಿ ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಎಂದು ಸಲಹೆ ಮಾಡಿದರು.

ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾಗುವಂತ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದರೆ ಸಾಮಾಜಿಕ ಅಂತ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡಿಕೊಂಡು ಶುಚಿತ್ವ ಕಾಪಾಡಿಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಯಾವ ಯಾವ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಜನರು ಉದಾಸೀನ ತೋರಿದ್ದಾರೋ ಅಂತಹ ಕಡೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಸರ್ಕಾರಗಳಿಗೆ ಲಾಕ್‍ಡೌನ್ ಜಾರಿ ಮಾಡುವುದು ಅನಿವಾರ್ಯವಾಯಿತು. ನಮ್ಮಲ್ಲಿ ಅಂತಹ ಪರಿಸ್ಥಿತಿ ಬರುವುದು ಬೇಡ ಎಂದು ಹೇಳಿದರು.

80 ಸಾವಿರದಿಂದ ಒಂದು ಲಕ್ಷದವರೆಗೆ ಕೋವಿಡ್ ಪರೀಕ್ಷೆಗಳನ್ನು ಪ್ರತಿನಿತ್ಯ ನಡೆಸಬೇಕೆಂಬ ಗುರಿ ನೀಡಲಾಗಿದ್ದು, ಕಂಟೈನ್ಮೆಂಟ್ ವಲಯದಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡಿದರೆ ಸೋಂಕಿತರನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದರು.

ಕಂಟೈನ್ಮೆಂಟ್ ಜೋನ್‍ಗಳಲ್ಲಿ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ಕೊಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವ ನಗರಗಳಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆಯೋ ಅಂತಹ ಕಡೆ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ಮಾಡಿದ್ದಾರೆ.

ಈಗಾಗಲೇ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ಕಫ್ರ್ಯೂ ವಿಸಿರುವ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಈವರೆಗೂ ಎರಡೂವರೆ ಕೋಟಿ ಜನರಿಗೆ ಕೋವಿಡ್ ಟೆಸ್ಟ್ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇದರ ಪ್ರಮಾಣವನ್ನು ಹೆಚ್ಚಳ ಮಾಡಲಾಗುವುದು. ಮೈಕ್ರೋ ಕಂಟೋನ್ಮೆಂಟ್ ವಲಯಗಳನ್ನು ಜಾರಿ ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.

Facebook Comments

Sri Raghav

Admin