ಮೋದಿ ಅಲೆಗೆ ಸಿಲುಕಿ ನಲುಗುತ್ತಿರುವ ದೋಸ್ತಿಗಳು, ಬಿಜೆಪಿಗೆ ಭಾರಿ ಮುನ್ನಡೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 23- ಜಿದ್ದಾಜಿದ್ದಿನಿಂದ ಕೂಡಿದ್ದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮುಂದೆ ದೋಸ್ತಿ ಪಕ್ಷಗಳಿಗೆ ಭಾರೀ ಮುಖಭಂಗವಾಗಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿದೆ.

ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಕೇವಲ ಆರು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. [ LOKSABHA ELECTIONS 2019 RESULT – Live Updates]

ಚುನಾವಣೆಗೂ ಮುನ್ನವೇ ದೇಶದ ಗಮನ ಸೆಳೆದಿದ್ದ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೊದಲ ಎರಡು ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತೀವ್ರ ಸ್ಪರ್ಧೆಯೊಡ್ಡುತ್ತಿರುವ ಚಿತ್ರನಟಿ ಹಾಗೂ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತ ಅಂಬರೀಶ್ ಸಮಬಲ ಹೋರಾಟ ಕಂಡುಬಂದಿದೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು.

ಕಲ್ಪತರು ನಾಡು ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ಸೋಲಿಲ್ಲದ ಸರದಾರನೆಂದೇ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಲ್ಬುರ್ಗಿಯಲ್ಲಿ ಭಾರೀ ಹಿನ್ನಡೆ ಕಂಡಿದ್ದರೆ,ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರು ಮುನ್ನಡೆ ಸಾಧಿಸಿದ್ದಾರೆ.

ಸತತ ಏಳು ಬಾರಿ ಗೆದ್ದು ದಾಖಲೆ ಬರೆದಿದ್ದ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಕೂಡ ಹಿನ್ನಡೆ ಕಂಡಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅಚ್ಚರಿಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕೋಲಾರದಂತೆ ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಪ್ರಾರಂಭಿಕ ಸುತ್ತಿನಿಂದಲೂ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಡಾ.ವೀರಪ್ಪ ಮೊಯ್ಲಿಗೆ ಭಾರೀ ಹಿನ್ನಡೆಯಾಗಿದೆ.

ಬೆಂಗಳೂರಿನಲ್ಲಿ ಮೂರು ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದರೆ, ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಹರ್ಷದ್ ಅವರು ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ವಿರುದ್ಧ ಮುನ್ನಡೆ ಸಾಧಿಸಿದ್ದರು.

ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಮುನ್ನಡೆ ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಹಿನ್ನಡೆ ಕಂಡಿದ್ದಾರೆ. ನಿರೀಕ್ಷೆಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ.

ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಶೋಭ ಕರಂದ್ಲಾಜೆ ಜಯಗಳಿಸಿದ್ದಾರೆ. ದೋಸ್ತಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹಿನ್ನಡೆಯಲ್ಲಿದ್ದಾರೆ.

ನಿರೀಕ್ಷೆಯಂತೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್‍ಕುಮಾರ್ ಕಟೀಲ್ ಭಾರೀ ಮುನ್ನಡೆಯತ್ತ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆಯಾಗಿದೆ.

ತನ್ನ ವಿವಾದಾತ್ಮಕ ಹೇಳಿಕೆಯಿಂದಲೇ ಪಕ್ಷಕ್ಕೆ ಮುಜುಗರ ತರುತ್ತಿದ್ದ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಭಾರೀ ಮತಗಳ ಅಂತರದಿಂದ ಗೆದ್ದಿದ್ದಾರೆ. ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ನಿರೀಕ್ಷೆಗೂ ಮೀರಿದ ಮತಗಳಿಂದ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಅವರಿಗೆ ಹಿನ್ನಡೆಯಾಗಿದೆ.

ಬೆಣ್ಣೆನಗರಿ ದಾವಣಗೆರೆಯಲ್ಲೂ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಭಾರೀ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ಮಂಜಪ್ಪ ಹಿನಡೆಯಲ್ಲಿದ್ದಾರೆ. ಉಳಿದಂತೆ ಹೈದರಾಬಾದ್ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಬಿಜಾಪುರ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಮುಂಬೈ ಕರ್ನಾಟಕದ ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಕಂಡಿದೆ.  ಒಟ್ಟಾರೆ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬರುವ ಲಕ್ಷಣಗಳು ಗೋಚರಿಸಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin