ಹಳೆ ಕಾಮಗಾರಿ ಪೂರ್ಣಗೊಳಿಸಿದ ಬಳಿಕವೇ ಹೊಸ ಕಾಮಗಾರಿ ಕೈಗೊಳ್ಳಿ : ಮಾಧುಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಸೆ.8- ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿದ ಬಳಿಕ ಹೊಸ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ವೇಗ ನೀಡಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಈಗ ಕೈಗೊಂಡಿರುವ ರಸ್ತೆ ಕಾಮಗಾರಿಗಳಿಂದ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೈನೇಜ್ ಬೋರ್ಡ್‍ಗಳನ್ನು ಅಳವಡಿಸಿ ಎಂದು ತಿಳಿಸಿದರು.

ರಸ್ತೆ ಕಾಮಗಾರಿ ಕೈಗೊಳ್ಳುವಾಗ ಲಭ್ಯವಿರುವ ಜಾಗ ಆಧಾರದ ಮೇಲೆ ರಸ್ತೆ ಮತ್ತು ಫುಟ್‍ಪಾತ್‍ಅನ್ನು ನಿರ್ಮಾಣ ಮಾಡಬೇಕು. ನಗರದಲ್ಲಿ ಏಕಕಾಲಕ್ಕೆ ರಸ್ತೆಗಳನ್ನು ಅಗೆದುಬಿಟ್ಟರೆ ಹೇಗೆ ಎಂದು ಪ್ರಶ್ನಿಸಿದರು. ಈ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಪ್ರತಿ ಕಾಮಗಾರಿಯ ಪ್ರಗತಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.

ರಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗಿರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಿಕೊಂಡು ವಿದ್ಯುತ್ ಕಂಬಗಳ ಸ್ಥಳಾಂತರ/ಅಳವಡಿಕೆ, ರಸ್ತೆ ವಿಭಜಕ ನಿರ್ಮಾಣ, ಮತ್ತಿತರ ಕೆಲಸ-ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರೈಸುವಂತೆ ಸ್ಮಾರ್ಟ್ ಸಿಟಿ ಎಂಜಿನಿಯರ್ ಹಾಗೂ ಬೆಸ್ಕಾಂ ಎಸ್‍ಇ ಗೋವಿಂದಪ್ಪ ಅವರಿಗೆ ಸೂಚಿಸಿದರು.

ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿ ಕಾಮಗಾರಿ ನಡೆಸಿ ರಸ್ತೆಯ ಅರ್ಧ ಭಾಗದಲ್ಲಿ ರಸ್ತೆ ಕಾಮಗಾರಿ, ಉಳಿದರ್ಧ ಭಾಗದಲ್ಲಿ ರಸ್ತೆ ಸಂಚಾರಕ್ಕೆ ಅವಕಾಶ ನೀಡಬೇಕು. ಅದೇ ರೀತಿ ಎಂ.ಜಿ.ರಸ್ತೆಯಲ್ಲಿನ ವ್ಯಾಪಾರಿಗಳಿಗೂ ತೊಂದರೆಯಾಗದಂತೆ ಕಾಮಗಾರಿ ಮಾಡುವಂತೆ ಸೂಚಿಸಿದರು. ಕಾಮಗಾರಿಗಳು ಸರಿಯಾಗಿ ಅನುಷ್ಠಾನ ಮಾಡದಿದ್ದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡಬಹುದು. ಆದರೆ, ಕಾಮಗಾರಿಗಳನ್ನು ನಿಲ್ಲಿಸಿ ಎಂದು ಹೇಳುವಂತಿಲ್ಲ. ಇದರಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಅವರು ರಸ್ತೆ ಕಾಮಗಾರಿಗಳನ್ನು ಕೈಗೊಂಡಿರುವ ಕಡೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ 100ಕ್ಕೂ ಹೆಚ್ಚು ಸೈನೇಜ್ ಬೋರ್ಡ್‍ಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ ಎಂದರು.  ಸಂಸದ ಜಿ.ಎಸ್.ಬಸವರಾಜ್, ಶಾಸಕ ಜಿ.ಬಿ. ಜ್ಯೋತಿಗಣೇಶ್, ಮೇಯರ್ ಫರೀದಾ ಬೇಗಂ, ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಟೂಡಾ ಅಧ್ಯಕ್ಷ ನಾಗೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಭಾಗವಹಿಸಿದ್ದರು.

Facebook Comments