ಮೇಕೆದಾಟು ಯೋಜನೆ : ಕೇಂದ್ರ-ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

mahadavi
ನವದೆಹಲಿ, ಡಿ.12- ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದ ಜಲ ಆಯೋಗ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಸಂಬಂಧ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಕರ್ನಾಟಕದ ಮೇಕೆದಾಟು ಯೋಜನೆ ಕಾನೂನು ಬಾಹಿರ. ಇದಕ್ಕೆ ಜಲ ಆಯೋಗ ಒಪ್ಪಿಗೆ ನೀಡಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದ್ದ ತಮಿಳುನಾಡು ಸರ್ಕಾರ

ಈ ಉದ್ದೇಶಿತ ಯೋಜನೆಯನ್ನು ನಿಲ್ಲಿಸಲು ಕೇಂದ್ರ ಮತ್ತು ಕರ್ನಾಟಕಕ್ಕೆ ಸೂಚನೆ ನೀಡುವಂತೆ ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ನಾಲ್ಕು ವಾರಗಳೊಳಗೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಸಲ್ಲಿಸಲಿರುವ ಪ್ರತಿಕ್ರಿಯೆ ಪಡೆದ ನಂತರ ಸುಪ್ರೀಂಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ.
ಮೇಕೆದಾಟು ಯೋಜನೆ ಬಗ್ಗೆ ಮೊದಲಿನಿಂದಲೂ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಇದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ, ನಿನ್ನೆಯಿಂದ ಆರಂಭವಾಗಿರುವ ಸಂಸತ್‍ನ ಚಳಿಗಾಲದ ಅಧಿವೇಶನದಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದೆ.

Facebook Comments

Sri Raghav

Admin