ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.2- ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹಿಂತಿರುಗುವವರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಈವರೆಗೂ ಮಹಾರಾಷ್ಟ್ರದಿಂದ ಬಂದವರಿಗೆ 7ದಿನಗಳ ಕ್ವಾರಂಟೈನ್ ಅವಧಿಯನ್ನು ನಿಗದಿಪಡಿಸಲಾಗಿತ್ತು. ಆದರೆ ಬಹುತೇಕ ಕೊರೊನಾ ಸೋಂಕಿನ ಪ್ರಕರಣಗಳು ಮಹಾರಾಷ್ಟ್ರದ ಸಂಪರ್ಕ ಇರುವ ಹಿನ್ನೆಲೆಯಲ್ಲಿ ಒಂದು ವಾರದಿಂದ 14 ದಿನಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಸಂಜೆ ವೇಳೆಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಹೋಂ ಕ್ವಾರಂಟೈನ್ ಹಾಗೂ ಬೇರೆ ರಾಜ್ಯಗಳಿಂದ ಬಂದವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಇರಲಿದೆ ಎಂದು ಹೇಳಿದರು.

ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಪಿಒ ಬಳಗದೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕಲಬುರಗಿ, ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಗಡಿಭಾಗಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಬಿಗಿಗೊಳಿಸುವಂತೆ ಸೂಚಿಸಲಾಗಿದೆ. ಕಳ್ಳದಾರಿಗಳು, ಎತ್ತಿನ ಗಾಡಿ ಮೂಲಕ ಬರುವವರ ಮೇಲೆ ಹದ್ದಿನ ಕಣ್ಣಿಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

ಕೊರೊನಾ ನಿಯಂತ್ರಣದಲ್ಲಿ ಕಾಲಕಾಲಕ್ಕೆ ಅಧಿಕಾರಿಗಳು ಹೋಂ ಕ್ವಾರಂಟೈನ್ ಮತ್ತು ಸಾಂಸ್ಥಿಕ ಕ್ವಾರಂಟೈನ್‍ಗಳಿಗೂ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡಬೇಕು. ಕಾನೂನು ಉಲ್ಲಂಘಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚನೆ ಕೊಟ್ಟರು.

Facebook Comments