ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಮಳವಳ್ಳಿ, ಡಿ.5- ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪಡಿಂತಹಳ್ಳಿ ಗ್ರಾಮದ ಶಿಂಷಾ ರಸ್ತೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಪಡಿಂತಹಳ್ಳಿ ಗ್ರಾಮದಿಂದ ಶಿಂಷಾಪುರಕ್ಕೆ ತೆರಳುವ ರಸ್ತೆಯಲ್ಲಿ ಸುಮಾರು 28 ರಿಂದ 30 ವರ್ಷದ ಯುವಕನನ್ನು ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಅಥವಾ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದು, ವ್ಯಕ್ತಿಯ ದೇಹ ಅರೆಬೆಂದ ಸ್ಥಿತಿಯಲ್ಲಿದೆ ಎಂದು ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ, ಡಿವೈಎಸ್‍ಪಿ ಪೃಥ್ವಿ, ಸಿಪಿಐ ಎ.ಕೆ.ರಾಜೇಶ್, ಪಿಎಸ್‍ಐ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದುಷ್ಕರ್ಮಿಗಳು ಬೇರೆ ಕಡೆ ಕೊಲೆ ಮಾಡಿ ಇಲ್ಲಿಗೆ ತಂದು ಸುಟ್ಟಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ ಮಾತನಾಡಿ, ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಜತೆಗೆ ಕೊಲೆಯಾದ ವ್ಯಕ್ತಿಯ ಮಾಹಿತಿ ಪತ್ತೆಯಾದಲ್ಲಿ ಕೊಲೆಗಾರರನ್ನು ಹಿಡಿಯಲು ಸಹಕಾರವಾಗಲಿದೆ. ಕೂಡಲೇ ಪ್ರಕರಣ ಭೇದಿಸಲು ತನಿಖಾ ತಂಡ ರಚಿಸಿ ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Facebook Comments