ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಶಾಸಕಾಂಗ ಸಭೆ ನಡೆಯಿತು.

ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸುಮಾರು 50 ಮಂದಿ ಖರ್ಗೆ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿ ಮಾಡಿದ ಬಿಫಾರಂನೊಂದಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿಯಾದ ಖರ್ಗೆ ಅವರು ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಿಯಮಾವಳಿ ಪ್ರಕಾರ ನಾಮಪತ್ರ ಸಲ್ಲಿಕೆಗೆ ನಾಲ್ಕು ಮಂದಿ ಅಭ್ಯರ್ಥಿಗಳ ಜೊತೆಯಲ್ಲಿರಬೇಕು.

ಹಾಗಾಗಿ ಮೊದಲ ನಾಮಪತ್ರ ಸಲ್ಲಿಕೆ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ರಮೇಶ್‍ಕುಮಾರ್ ಅವರು 2ನೇ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್, ದಿನೇಶ್‍ಗುಂಡೂರಾವ್, ಎಂ.ಬಿ.ಪಾಟೀಲ್, 3ನೇ ಹಂತದ ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್ ಅವರು ಜೊತೆಯಲ್ಲಿದ್ದರು.

ರಾಜ್ಯಸಭೆಯಲ್ಲಿ ತೆರವಾಗಿರುವ ಒಟ್ಟು ನಾಲ್ಕು ಸ್ಥಾನಗಳಿಗೆ ಸದಸ್ಯರ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು, ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಕಾಂಗ್ರೆಸ್ ಖರ್ಗೆ ಅವರ ಹೆಸರನ್ನು ಕಳೆದ ಶುಕ್ರವಾರವೇ ಪ್ರಕಟಿಸಿತ್ತು. ಇಂದು ಬೆಳಗ್ಗೆ ಜೆಡಿಎಸ್ ವತಿಯಿಂದ ದೇವೇಗೌಡರು ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಲ್ಲಿ ಇನ್ನು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಬಿಜೆಪಿ ಕೇವಲ ಇಬ್ಬರನ್ನು ಕಣಕ್ಕಿಸಿದ್ದೇ ಆದರೆ ರಾಜ್ಯಸಭೆಗೆ ಚುನಾವಣೆ ನಡೆಯುವುದಿಲ್ಲ. ಬಿಜೆಪಿಯ ಇಬ್ಬರು, ಕಾಂಗ್ರೆಸ್‍ನ ಒಬ್ಬರು, ಜೆಡಿಎಸ್‍ನ ಮತ್ತೊಬ್ಬರು ಅವಿರೋಧವಾಗಿ ಆಯ್ಕೆಯಾಗುತ್ತಾರೆ.

ಒಂದು ವೇಳೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇಯಾದರೆ ಆಗ ಚುನಾವಣೆ ಅನಿವಾರ್ಯವಾಗಲಿದೆ. ಎಲ್ಲ ಸಾಧ್ಯಸಾಧ್ಯತೆಗಳ ಬಗ್ಗೆ ಇಂದು ಕಾಂಗ್ರೆಸ್‍ನ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ವಿರುದ್ಧ ಸೋಲು ಕಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕರಿಗೆ ಗೌರವ ಸಲ್ಲಿಸಿದೆ.

Facebook Comments