ಮಂಡ್ಯ, ತುಮಕೂರಲ್ಲಿ ಟೈಟ್ ಫೈಟ್, ಸಿಎಂ ಪುತ್ರನನ್ನು ಹಿಂದಿಕ್ಕಿದ ಸುಮಲತಾ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಮೇ 23- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರೆ, ಮಂಡ್ಯ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಸಮಬಲದ ಹೋರಾಟ ನಡೆಸುತ್ತಿರುವುದು ಕಂಡುಬಂದಿತು.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಆರಂಭದಿಂದಲೂ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಕಾಯ್ದುಕೊಂಡಿದ್ದು, ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆಗೆ 55,918 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದರು. [ LOKSABHA ELECTIONS 2019 RESULT – Live Updates]

ಕಳೆದ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜೆಡಿಎಸ್‍ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಹೈ ವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ಸಮಬಲದ ಹೋರಾಟ ಕಂಡುಬಂದಿತ್ತು.

ಒಮ್ಮೆ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದರೆ, ಮತ್ತೊಮ್ಮೆ ಸುಮಲತಾ ಮುನ್ನಡೆ ಸಾಧಿಸಿ ಮತ ಎಣಿಕೆಯ ವಿವರಗಳು ಹಾವು-ಏಣಿಯಂತೆ ಕಂಡುಬಂದವು. ಈ ಕ್ಷೇತ್ರದಲ್ಲಿ ಕಳೆದ ಬಾರಿ ಸಚಿವ ಸಿ.ಎಸ್.ಪುಟ್ಟರಾಜು ಜೆಡಿಎಸ್‍ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಸಮಬಲದ ಹೋರಾಟ ಆರಂಭಿಕ ಹಂತದಲ್ಲಿ ಕಂಡುಬಂದಿತು.  ಮತ ಎಣಿಕೆ ಪ್ರಾರಂಭದಲ್ಲಿ ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದರೆ, ಆನಂತರದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಮುನ್ನಡೆ ಸಾಧಿಸಿದ್ದರು.

ಈ ಕ್ಷೇತ್ರದಲ್ಲೂ ಮತ ಎಣಿಕೆ ಸಂದರ್ಭದಲ್ಲಿ ದೇವೇಗೌಡ ಮತ್ತು ಬಸವರಾಜು ನಡುವಿನ ಮುನ್ನಡೆಯಲ್ಲಿ ಏರಿಳಿತ ಕಂಡುಬಂದಿತ್ತು. ಸಂಸದ ಮುದ್ದಹನುಮೇಗೌಡರು ಕಳೆದ ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಈ ಬಾರಿ ಕಾಂಗ್ರೆಸ್‍ನಿಂದ ಟಿಕೆಟ್ ಸಿಗದಿದ್ದರಿಂದ ಸ್ಪರ್ಧಿಸಿರಲಿಲ್ಲ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಹಾಗೂ ಮೈತ್ರಿ ಅಭ್ಯರ್ಥಿ ಆರ್.ಧೃವನಾರಾಯಣ್ ಮುನ್ನಡೆಯಲ್ಲಿದ್ದರು. ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಹಿನ್ನಡೆಯಲ್ಲಿದ್ದರು.

ಆದರೆ, ಆರಂಭಿಕ ಹಂತದಲ್ಲಿ ಶ್ರೀನಿವಾಸ ಪ್ರಸಾದ್ ಮುನ್ನಡೆಯಲ್ಲಿದ್ದರು. ಧೃವನಾರಾಯಣ್ ಕಳೆದ ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಭಾರೀ ಮುನ್ನಡೆ ಸಾಧಿಸಿದ್ದರು. ಆರಂಭಿಕ ಹಂತದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣಗೌಡ ಮುನ್ನಡೆ ಗಳಿಸಿದ್ದರೂ ಆನಂತರ ಹಿನ್ನಡೆ ಅನುಭವಿಸುವಂತಾಯಿತು. [ LOKSABHA ELECTIONS 2019 RESULT – Live Updates]

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ್ರತಾಪ್ ಸಿಂಹ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದರು. ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯ್‍ಶಂಕರ್ ಹಿನ್ನಡೆಯಲ್ಲಿದ್ದರು. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರತಾಪ್‍ಸಿಂಹ ಜಯಗಳಿಸಿದ್ದರು.  ಒಟ್ಟಾರೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಸಮಬಲದ ಹೋರಾಟ ಕಂಡುಬಂದಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin