ಹೀನಾಯ ಸೋಲನುಭವಿಸಿದ ಜೆಡಿಎಸ್..! ಮರೆಯಲಾಗದ ನೋವು ನೀಡಿದ ಮಂಡ್ಯ ರಿಸಲ್ಟ್ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 23- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿದ್ದು, ಹೀನಾಯ ಸೋಲು ಅನುಭವಿಸಿದೆ. ಬಿಜೆಪಿಯನ್ನು ಮಣಿಸಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು.

ಜೆಡಿಎಸ್‍ನ ಭದ್ರಕೋಟೆ ಹಾಸನವನ್ನು ಮಾತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ, ಜೆಡಿಎಸ್‍ನ ಮತ್ತೊಂದು ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೋಲುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ತವರು ಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಗೆಲುವು ಸಾಧಿಸಲಾಗಲಿಲ್ಲ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. ಇಲ್ಲಿ ಜಿದ್ದಾಜಿದ್ದಿನ ಹೋರಾಟವೇ ನಡೆದಿತ್ತು. ಭಾರೀ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಸುಮಾರು 1.42 ಲಕ್ಷ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್, ಶಿವಮೊಗ್ಗ ಕ್ಷೇತ್ರದಲ್ಲಿ ಮಧು ಬಂಗಾರಪ್ಪ, ಉತ್ತರ ಕನ್ನಡ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಆನಂದ್ ಅಸ್ನೋಟಿಕರ್, ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಡಾ.ಸುನಿತಾ ದೇವಾನಂದ ಚೌಹಾಣ್ ಅವರು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಸೋತಿದ್ದಾರೆ.

ಕಳೆದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯಗಳಿಸಿದ್ದನ್ನೇ ಆಧಾರವಾಗಿಟ್ಟುಕೊಂಡು ಈ ಚುನಾವಣೆಯಲ್ಲೂ ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಗಳನ್ನು ಉಭಯ ಪಕ್ಷಗಳು ಕಣಕ್ಕಿಳಿಸಿದ್ದವು.

ಆದರೆ, ಕಾಂಗ್ರೆಸ್-ಜೆಡಿಎಸ್‍ನ ಲೆಕ್ಕಾಚಾರವನ್ನು ಮತದಾರರು ತಲೆಕೆಳಗಾಗುವಂತೆ ತೀರ್ಪು ನೀಡಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವಿನ ಒಳ ಜಗಳವೂ ಉಭಯ ಪಕ್ಷಗಳ ಪರಾಭವಕ್ಕೆ ಕಾರಣ ಎನ್ನಲಾಗುತ್ತಿದೆ. ಒಟ್ಟಾರೆ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿ ಪಕ್ಷಗಳು ಭಾರೀ ಸೋಲು ಅನುಭವಿಸಿದಂತಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin