4,500 ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲು ಖಾಸಗಿ ವೈದ್ಯಕೀಯ ಕಾಲೇಜು ಮಂಡಳಿ ಒಪ್ಪಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.30- ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸದುದ್ದೇಶದಿಂದ ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜು ಮಂಡಳಿ 4,500 ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲು ಮಹತ್ವದ ತೀರ್ಮಾನ ಕೈಗೊಂಡಿವೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಖಾಸಗಿ ಕಾಲೇಜುಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ಜರುಗಿತು. ರಾಜ್ಯ ಸರ್ಕಾರ 6000 ಹಾಸಿಗೆಗಳನ್ನು ನೀಡಬೇಕೆಂದು ಖಾಸಗಿ ಕಾಲೇಜುಗಳ ಮಂಡಳಿಗೆ ಮನವಿ ಮಾಡಿಕೊಂಡಿತು.

ಇದಕ್ಕೆ ಒಪ್ಪದ ಆಡಳಿತ ಮಂಡಳಿ 6000 ಹಾಸಿಗೆ ನೀಡಲು ಸಾಧ್ಯವಿಲ್ಲ. ಕನಿಷ್ಠಪಕ್ಷ 4500 ಬೆಡ್‍ಗಳನ್ನು ನೀಡುವುದಾಗಿ ಸರ್ಕಾರಕ್ಕೆ ಆಶ್ವಾಸನೆ ಕೊಟ್ಟರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಖಾಸಗಿ ಕಾಲೇಜುಗಳು 4500 ಹಾಸಿಗೆಗಳನ್ನು ಕೋವಿಡ್ ಪೀಡಿತರಿಗೆ ನೀಡಲು ಸಮ್ಮತಿಸಿದ್ದಾರೆ. ಇದರಿಂದ ನಮಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಸರ್ಕಾರ ಮಾಡಿಕೊಂಡ ಮನವಿಗೆ ಖಾಸಗಿ ಆಸ್ಪತ್ರೆಯವರು ಸ್ಪಂದಿಸಿದ್ದಾರೆ. ಇದಕ್ಕಾಗಿ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಹಾಸಿಗೆಗಳು ಲಭ್ಯವಾಗುತ್ತಿರುವುದು ನಮಗೆ ಸಂತಸ ತಂದಿದೆ ಎಂದು ತಿಳಿಸಿದರು.  ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚಿಸಲಾಗಿದೆ. ಆದರೆ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ ಎಂದರು.

ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ.ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಲಾಗಿದೆ.

ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿವೆ. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿ ಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಇದಲ್ಲದೆ ಕೋವಿಡ್ ಕೇರ್ ಸೆಂಟರ್ ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಲಾಗಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments