ಮೇಕೆದಾಟು ಯೋಜನೆ ಅನುಷ್ಠಾನ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.5- ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡು ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಸೇರಿದಂತೆ ಎಲ್ಲರ ರಾಜಕೀಯ ಪಕ್ಷಗಳು ರಾಜಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರದ ನಿಲುವು ಸ್ಪಷ್ಟವಾಗಿರುವುದರಿಂದ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಕುಡಿಯುವ ನೀರಿನ ಯೋಜನೆಗಾಗಿ ರಾಜ್ಯ ಸರ್ಕಾರ ಈಗಾಗಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ದಪಡಿಸಿದೆ. ಕೇಂದ್ರ ಸರ್ಕಾರದಿಂದ ನಮಗೆ ಸಂಪೂರ್ಣ ಸಹಕಾರ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಲಿದ್ದಾರೆ.

ಎಲ್ಲವು ಬಗೆಹರಿದ ನಂತರ ಕಾಮಗಾರಿ ಆರಂಭ ಮಾಡುತ್ತೇವೆ. ಇದೇ ವೇಳೆ, ಮೇಕೆದಾಟು ವಿಚಾರವಾಗಿ ಯಾರಾದರೂ ಪ್ರತಿಭಟನೆ ಮಾಡಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಸ್ಪಷ್ಪಡಿಸಿದರು.

Facebook Comments