ಪತ್ರಕರ್ತೆಗೆ ಸಚಿವ ಎಂ.ಜೆ.ಅಕ್ಬರ್ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಅಮಿತ್ ಷಾ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Amit-shah--01

ನವದೆಹಲಿ,ಅ.13- ಮಹಿಳಾ ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕೇಂದ್ರದ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.  ನಿನ್ನೆಯಷ್ಟೇ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಅವರು ಮೀ ಟು ಪ್ರಕರಣಗಳ ಗುರುತಂತೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವುದಾಗಿ ಹೇಳಿದ್ದರು. ಈ ಬೆಳವಣಿಗೆಗಳ ನಡುವೆಯೇ ಅಮಿತ್ ಷಾ ಅಕ್ಬರ್ ವಿರುದ್ಧ ಕ್ರಮ ಕೈಗೊಳ್ಳುವ ಸುಳಿವು ನೀಡಿರುವುದು ಹೊಸ ಬೆಳವಣಿಗೆ ಎನಿಸಿದೆ.

ಸಚಿವರು ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಭಾರತಕ್ಕೆ ಬಂದ ತಕ್ಷಣ ಅವರ ಮೇಲಿನ ಆರೋಪಗಳ ಬಗ್ಗೆ ಸ್ಪಷ್ಟನೆ ಕೇಳಲಾಗುವುದು. ಇದರ ಬಗ್ಗೆ ಖುದ್ದು ಪರಿಶೀಲನೆ ಮಾಡುತ್ತೇವೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಆಶ್ವಾಸನೆ ಕೊಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಮೇಲೆ ಆಪಾದನೆ ಮಾಡುವುದು ಈಗ ತುಂಬ ಸುಲಭ. ಅದರಲ್ಲೂ ಸಾಮಾಜಿಕ ಜಾಲತಾಣಗಳು ಬಂದ ಮೇಲೆ ಇಂತಹ ಆರೋಪಗಳು ಹೆಚ್ಚುತ್ತಲೇ ಇವೆ. ಇದರಲ್ಲಿ ಸತ್ಯಾಂಶ ಇದೆಯೇ ಇಲ್ಲವೇ ಎಂಬುದನ್ನು ಪರಿಶೀಲನೆ ಮಾಡಬೇಕು. ಖಂಡಿತವಾಗಿಯೂ ನಾವು ಈ ಪ್ರಕರಣದ ಬಗ್ಗೆ ಗಂಭೀರವಾಗಿದ್ದೇವೆ. ಆದರೆ ಆರೋಪ ಸಾಬೀತು ಮಾಡಲು ಸಾಕ್ಷಾಧಾರಗಳು ಬೇಕು. ಆರೋಪದಲ್ಲಿ ಸತ್ಯಾಂಶವಿದ್ದರೆ ಕ್ರಮ ಕೈಗೊಳ್ಳುವುದು ಖಚಿತ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.

ಮೂರು ದಿನಗಳ ಹಿಂದಷ್ಟೇ ಮಹಿಳಾ ಪತ್ರಕರ್ತೆಯೊಬ್ಬರು ದಿ ಟೆಲಿಗ್ರಾಫ್ ಪತ್ರಿಕೆಯ ಸಂಪಾದಕರಾಗಿದ್ದ ಎಂ.ಜೆ.ಅಕ್ಬರ್ ಅವರು ತಮಗೆ ವೃತ್ತಿ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡಿದ್ದರು.  ಬಾಲಿವುಡ್ ನಟಿ ತನುಶ್ರೀ ದತ್ತ ನನಗೆ ನಟ ನಾನಾಪಾಟೇಕರ್ ಲೈಂಗಿಕ ಕಿರುಕುಳ ನೀಡಿದ್ದರು ಎಂದು ದೂರು ನೀಡಿದ್ದರು. ಈ ಪ್ರಕರಣ ಹೊರ ಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಮೀ ಟು ಎಂಬ ಅಭಿಯಾನ ಆರಂಭಿಸಿದ್ದರಿಂದ ಅನೇಕ ಪ್ರಕರಣಗಳು ಹೊರಬಂದಿದ್ದವು.

ಈಗಾಗಲೇ ಎಂ.ಜಿ.ಅಕ್ಬರ್ ಪ್ರಕರಣದ ಬಗ್ಗೆ ವಿರೋಧ ಪಕ್ಷಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ. ಇನ್ನು ಸಚಿವೆ ಮನೇಕಾ ಗಾಂಧಿ ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ಪ್ರಕರಣವನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಹುದೆಂಬ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗುವ ಮೊದಲೇ ಎಚ್ಚೆತ್ತುಕೊಳ್ಳುವ ಮುನ್ಸೂಚನೆ ಸಿಕ್ಕಿದೆ.

Facebook Comments