12 ಜಿಲ್ಲೆಗಳ ನೆರೆ ನಿರ್ವಹಣೆಗೆ ಸುವರ್ಣ ವಿಧಾನಸೌಧದಲ್ಲಿ ಕಚೇರಿ : ಸಚಿವ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಸೆ.19- ಉತ್ತರ ಕರ್ನಾಟಕ ಭಾಗದ 12 ಜಿಲ್ಲೆಗಳ ಸಮಸ್ಯೆಗಳ ಪರಿಹಾರಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ಕಚೇರಿಯನ್ನು ತೆರೆದು ಆರ್ಥಿಕ ಮತ್ತು ಆಡಳಿತಾತ್ಮಕ ಅಧಿಕಾರ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 8 ಮತ್ತು 9ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎರಡು ದಿನಗಳ ಸಭೆ ನಡೆದಿದ್ದು, ಎಲ್ಲ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಭಾಗವಹಿಸಿದ್ದು, ಗ್ರಾಮೀಣಾಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು.

ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕೆ ಸುವರ್ಣ ವಿಧಾನಸೌಧದಲ್ಲಿ ಕಚೇರಿಗಳ ಸ್ಥಾಪನೆ ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದ ಹಿನ್ನೆಲೆಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಬೀದರ್, ರಾಯಚೂರು, ಗದಗ, ಬಿಜಾಪುರ, ಬಾಗಲಕೋಟೆ, ಕೊಪ್ಪಳ ಸೇರಿದಂತೆ 12 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕಚೇರಿ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಆರ್ಥಿಕ ಆಡಳಿತಾತ್ಮಕ ಅಧಿಕಾರ ನೀಡುವುದರ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸಭಾಧ್ಯಕ್ಷರೊಂದಿಗೂ ಕೂಡ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕಚೇರಿ ತೆರೆಯುವುದರಿಂದ ಆ ಭಾಗ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಸರ್ಕಾರಿ ಕೆಲಸಗಳಿಗೆ ಬೆಂಗಳೂರಿಗೆ ಅಲೆಯುವುದು ತಪ್ಪುತ್ತದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗಕ್ಕೆ ಬಹಳ ವರ್ಷಗಳಿಂದ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿತ್ತು. ಹೀಗಾಗಿ ಈ ಭಾಗದಲ್ಲಿ ಒಂದು ಕಚೇರಿ ಸ್ಥಾಪನೆ ಮಾಡುವ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕಚೇರಿ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

# ದಾವಣಗೆರೆ, ಸೆ.19- ನೆರೆ ನಿರ್ವಹಣೆ ನಮ್ಮ ಜವಾಬ್ದಾರಿ ಹಾಗೂ ಕರ್ತವ್ಯ. ಆದರೆ, ಕಾಂಗ್ರೆಸ್ ಇದನ್ನು ರಾಜಕೀಯ ಮಾಡುತ್ತಿರುವುದು ಕುತಂತ್ರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲು ನಿನ್ನೆ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದೇ ರೀತಿ ರಸ್ತೆ ನಿರ್ಮಿಸಲು 500 ಕೋಟಿ ರೂ. ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಕೇಂದ್ರದಿಂದ ಪರಿಹಾರ ಬರಲು ವಿಳಂಬವಾಗಿದೆ. ಕೇವಲ ಒಂದು ರಾಜ್ಯದಲ್ಲಿ ಪ್ರವಾಹ ಉಂಟಾಗಿಲ್ಲ. 10 ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ವಿಳಂಬವಾಗಿದೆ. ಶೀಘ್ರ ಪರಿಹಾರ ಬರುತ್ತದೆ. ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಸಮರ್ಥವಾಗಿ ನಿಭಾಯಿಸುತ್ತೇವೆ. ಕಾಂಗ್ರೆಸ್‍ನವರು ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಾಟರಿ ಹೊಡೆದು ಮುಖ್ಯಮಂತ್ರಿಯಾದರು. ಬಿಜೆಪಿ ಒಡೆದು ಕೆಜೆಪಿ, ಬಿಎಸ್‍ಆರ್ ಪಕ್ಷಗಳು ಸ್ಥಾಪನೆಯಾಗಿದ್ದರಿಂದ ಇದರ ಲಾಭ ಪಡೆದು ಮುಖ್ಯಮಂತ್ರಿಯಾದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡಗಳಿಗೆ ಏನೂ ಅಭಿವೃದ್ಧಿ ಮಾಡದೆ ಹೊಗಳುಭಟ್ಟರಿಂದ ಹೊಗಳಿಸಿಕೊಂಡು ನಂತರ ನಡೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ 37 ಸಾವಿರ ಮತಗಳಿಂದ ಸೋತರು. ಅಲ್ಲದೆ ಬಹುಮತವಿದ್ದ ಅವರ ಪಕ್ಷ 78 ಸ್ಥಾನಗಳಿಗೆ ಇಳಿಯಿತು ಎಂದು ಟೀಕಿಸಿದರು.

ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಎಂದು ಜನಾಂದೋಲನ ಮಾಡಲು ಮುಂದಾಗಿರುವ ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.

Facebook Comments