ಸಮರ್ಪಕವಾಗಿ ಕಾಮಗಾರಿ ನಡೆಸದಿದ್ದರೆ ಕಾನೂನು ಕ್ರಮ : ಸಚಿವ ಆರ್.ಅಶೋಕ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.17- ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡದಿದ್ದರೆ ಅಂತಹ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮದ ಜತೆಗೆ ಕಪ್ಪು ಪಟ್ಟಿಗೂ ಸೇರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ನಾನೇ ಖುದ್ದಾಗಿ ಕಮರ್ಷಿಯಲ್‍ಸ್ಟ್ರೀಟ್ ಸೇರಿದಂತೆ ಅನೇಕ ಕಡೆ ಭೇಟಿ ನೀಡಿದ್ದೇನೆ. ಕಮರ್ಷಿಯಲ್ ಸ್ಟ್ರೀಟ್‍ನಲ್ಲಿ ಕಳಪೆ ಕಾಮಗಾರಿ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ಕಳಪೆ ಕಾಮಗಾರಿಯನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಗುಣಮಟ್ಟದಲ್ಲಿ ರಾಜಿಯಾಗುವುದಿಲ್ಲ. ನಮ್ಮ ನಿರೀಕ್ಷೆಗೆ ತಕ್ಕಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸ್ವಲ್ಪ ಲೋಪಕಂಡರೂ ಅಂತಹ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮದ ಜತೆಗೆ ಕಪ್ಪುಪಟ್ಟಿಗೆ ಸೇರಿಸುತ್ತೇನೆ ಎಂದು ಗುಡುಗಿದರು.

ಈಗಾಗಲೇ ಮಳೆಗಾಲ ಆರಂಭವಾಗಿರುವುದರಿಂದ ಕಾಲುವೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಶೋಲ್ಡರ್ ಡ್ರೈನೇಜ್, ಬಾಟಮ್ ನೆಕ್‍ಗಳನ್ನು ಸರಿಪಡಿಸುವಂತೆಯೂ ಸೂಚನೆ ಕೊಟ್ಟಿದ್ದೇನೆ. ಕಾಲುವೆಗಳಲ್ಲಿ ಹೂಳು ತೆಗೆದರೆ ರಸ್ತೆಗೆ ನೀರು ನುಗ್ಗುವುದಿಲ್ಲ. ಮಳೆ ಬಂದಾಗ ರಸ್ತೆಯಲ್ಲಿ ನೀರು ನಿಂತರೆ ಸಂಚಾರ ದಟ್ಟಣೆಯಗಲಿದೆ. ಇದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಅಶೋಕ್ ತಿಳಿಸಿದರು.

Facebook Comments