ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ: ಸಚಿವ ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.3-ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ಉಳಿದಿರುವ ಅವಧಿಯಲ್ಲಿ ನಾವು ಯಶಸ್ವಿಯಾಗಿ ಆಡಳಿತ ನೀಡುತ್ತೇವೆ. ಕಾಂಗ್ರೆಸ್ಸಿಗರು ಅಧಿಕಾರವಿಲ್ಲದೆ ಮನಸೋ ಇಚ್ಛೆ ಹೇಳಿಕೆ ನೀಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಹೇಳಿದರು.

ಬಿಜೆಪಿ ಸರ್ಕಾರ ಯಾವುದೇ ಸಂದರ್ಭದಲ್ಲೂ ಪತನವಾಗಬಹುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆ ಬರುವುದಿಲ್ಲ. ಅಧಿಕಾರ ಬಿಟ್ಟು ಕಾಂಗ್ರೆಸ್ಸಿಗರಿಗೆ ಇರುವುದಕ್ಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಧ್ಯಂತರ ಚುನಾವಣೆಯ ಜಪ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ, ತಿರುಳು ಇಲ್ಲ. ಕೇವಲ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಈ ಹೇಳಿಕೆಗಳಿಗೆ ಯಾವುದೇ ಮಹತ್ವ ಇಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಕೇಂದ್ರ ಸರ್ಕಾರ ಇಲ್ಲವೆ ಬಿಜೆಪಿಯ ಪಾತ್ರವಿಲ್ಲ ಎಂದು ಅಶೋಕ್ ಸ್ಪಷ್ಟಪಡಿಸಿದರು.

ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣವನ್ನು ಕೆಲವರು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೂ ಬಿಜೆಪಿಗೂ ಸಂಬಂಧವೇ ಇಲ್ಲ. ಹಿಂದೆ ನಮ್ಮ ನಾಯಕರಾದ ಯಡಿಯೂರಪ್ಪನವರ ಮೇಲೆ ಅನೇಕ ಪ್ರಕರಣಗಳು ದಾಖಲಾಗಿದ್ದವು. ಅವರು ಎಲ್ಲವನ್ನೂ ಕಾನೂನು ಮೂಲಕ ಹೋರಾಟ ನಡೆಸಿ ಎದುರಿಸಿದ್ದರು. ಈಗ ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣ ರಾಜಕೀಯ ಪ್ರೇರಿತ ಎಂದರೆ, ಯಡಿಯೂರಪ್ಪನವರ ಮೇಲಿನ ಪ್ರಕರಣವು ರಾಜಕೀಯವೇ ಎಂದು ಪ್ರಶ್ನಿಸಿದರು.

ಇನ್ನು ಶಿವಕುಮಾರ್ ಮೇಲೆ ಯಾವ ತನಿಖಾ ಸಂಸÉ್ಥಗಳು ಕೂಡ ತೀರ್ಪು ನೀಡಿಲ್ಲ. ಕೇವಲ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿವೆ. ಇಡಿ,ಸಿಬಿಐ ಸ್ವಾಯತ್ತ ಸಂಸ್ಥೆಗಳಾಗಿವೆ. ಅವುಗಳು ಯಾರ ಮೇಲಾದರೂ ಕ್ರಮ ಜರುಗಿಸಲು ಅವಕಾಶವಿದೆ. ಈ ರೀತಿ ಎಲ್ಲವನ್ನೂ ವಿರೋಧ ಪಕ್ಷಗಳು ರಾಜಕಾರಣ ಮಾಡಬಾರದು ಎಂದು ಹೇಳಿದರು.

ಕಳೆದ ತಿಂಗಳು ರಾಜ್ಯದ ನಾನಾ ಭಾಗಗಳಲ್ಲಿ ಉಂಟಾದ ಅತಿವೃಷ್ಟಿಯಿಂದ 38 ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ. ಕೇಂದ್ರದಿಂದ ಆಗಮಿಸಿದ್ದ ಅಧಿಕಾರಿಗಳಿಗೆ ನಮ್ಮ ಅಧಿಕಾರಿಗಳು ಸಂಪೂರ್ಣವಾದ ಮಾಹಿತಿ ನೀಡಿದ್ದಾರೆ. ಇದೇ 7 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರರು ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕೈಗೊಂಡಿದ್ದೇವೆ. ಮನೆಯಿಲ್ಲದವರಿಗೆ ಮನೆ ನಿರ್ಮಿಸಲು ಆರ್ಥಿಕ ನೆರವು, ಮನೆ ನಿರ್ಮಾಣವಾಗುವವರೆಗೂ ಶೆಡ್ ನಿರ್ಮಾಣ, ಸಂತ್ರಸ್ತರಿಗೆ ಮಧ್ಯವರ್ತಿಗಳ ಸಹಾಯವಿಲ್ಲದೆ 10 ಸಾವಿರ ರೂ., ಮೃತ ಕುಟುಂಬಗಳಿಗೆ 5 ಲಕ್ಷ ಪರಿಹಾರ ಸೇರಿದಂತೆ ನಾನಾ ರೀತಿಯ ಪರಿಹಾರ ಕಾರ್ಯಕೈಗೊಂಡಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಈ ಬಾರಿ ಬಹಳಷ್ಟು ನೆರೆ ಬಂದಿದೆ. ಇದರಿಂದ ದೊಡ್ಡ ಮಟ್ಟದ ಅನಾಹುತ ಸಂಭವಿಸಿದೆ. ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅಶೋಕ್ ತಿಳಿಸಿದರು.

Facebook Comments