‘ಕೌಂಟ್’ಡೌನ್ ಶುರು : ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಸಂಪೂರ್ಣ ನಿಷೇಧ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 20-ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮದವರನ್ನು ಹೊರತುಪಡಿಸಿ ಅಭ್ಯರ್ಥಿ, ಏಜೆಂಟ್‍ಗಳಿಗೂ ಮೊಬೈಲ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಲ್ಲದೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಇಬ್ಬರು ವೀಕ್ಷಕರನ್ನು ಮತ ಎಣಿಕೆ ಸಂದರ್ಭದಲ್ಲಿ ನೇಮಿಸಲಾಗುವುದು ಎಂದು ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಭ್ಯರ್ಥಿಗಳು ಹಾಗೂ ಏಜೆಂಟರು ಸೇರಿದಂತೆ ಯಾರಿಗೂ ಮೊಬೈಲ್ ಬಳಕೆಗೆ ಅವಕಾಶವಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‍ಗಳನ್ನಿಡಲು ವ್ಯವಸ್ಥೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲಿಗೆ ಅಂಚೆ ಮತ ಪತ್ರ ಮತ್ತು ಇಟಿಪಿಬಿಎಸ್‍ಗಳ ಎಣಿಕೆ ಪ್ರಕ್ರಿಯೆಯು ಸಂಬಂಧಪಟ್ಟ ಚುನಾವಣಾಧಿಕಾರಿಗಳ ಕೊಠಡಿಯಲ್ಲಿ ನಡೆಸಲಾಗುತ್ತದೆ.

ಮೂರು ಕ್ಷೇತ್ರಗಳಿಗೆ 11,063 ಅಂಚೆ ಮತಪತ್ರಗಳು, 563 ಇಟಿಪಿಬಿಎಸ್‍ಗಳು ಸ್ವೀಕೃತವಾಗಿವೆ ಎಂದರು. ಇವಿಎಂ ಮತ ಎಣಿಕೆ ಕಾರ್ಯವು ಬೆಳಗ್ಗೆ 8.30ರ ನಂತರ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿಗದಿಪಡಿಸಿರುವ ಮತ ಎಣಿಕೆ ಕೊಠಡಿಗಳಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿದೆ.

ಏ.18ರಂದು ಮತದಾನ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 31 ಅಭ್ಯರ್ಥಿಗಳಿದ್ದು, 15,56,997 ಮತದಾರರು ಮತ ಚಲಾಯಿಸಿದ್ದು, ಶೇ.54.66ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳಿದ್ದು, 11,96,697 ಮತದಾರರು ಮತಚಲಾಯಿಸಿದ್ದು, ಶೇ.54.28ರಷ್ಟು ಮತದಾನವಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳಿದ್ದು, 11,84,745 ಮತದಾರರು ಮತದಾನ ಮಾಡಿದ್ದು, ಶೇ.53.47ರಷ್ಟು ಮತದಾನವಾಗಿದೆ. ಬೆಂಗಳೂರು ಉತ್ತರಲೋಕಸಭಾ ಕ್ಷೇತ್ರದ ಮತ ಎಣಿಕೆಯು ಸೆಂಟ್‍ಜೋಸೆಫ್ ಇಂಡಿಯನ್ ಹೈಸ್ಕೂಲ್‍ನಲ್ಲಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೌಂಟ್ ಕಾರ್ಮೆಲ್ ಮಹಿಳಾ ಪಿಯು ಕಾಲೇಜಿನಲ್ಲಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜಯನಗರದ ಎಸ್‍ಎಸ್‍ಎಂಆರ್‍ವಿ ಪಿಯು ಕಾಲೇಜಿನಲ್ಲಿ ನಡೆಯಲಿದೆ ಎಂದರು.

ಮೂರೂ ಕ್ಷೇತ್ರಗಳಿಗೆ ಮತ ಎಣಿಕೆಗೆ ಅಗತ್ಯವಿರುವ 497 ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ಅಬ್ಸವರ್ಸ್‍ಗಳನ್ನು ನೇಮಿಸಲಾಗಿದ್ದು, ಶೇ.20ರಷ್ಟು ಹೆಚ್ಚುವರಿ ಸಿಬ್ಬಂದಿಗಳನ್ನು ಕಾಯ್ದಿರಿಸಲಾಗಿದೆ. ಈಗಾಗಲೇ ಒಂದು ಹಂತದ ತರಬೇತಿ ನೀಡಿದ್ದು, ಎರಡನೇ ಹಂತದ ತರಬೇತಿಯನ್ನು ಮೇ 22 ರಂದು ನೀಡಲಾಗುವುದು ಎಂದು ಹೇಳಿದರು.

ಮತ ಎಣಿಕೆಗೆ ಅನುಕೂಲವಾಗುವಂತೆ ಪ್ರತಿ ವಿಧಾನಸಭಾ ಕ್ಷೇತ್ರದ ಎಣಿಕೆ ಕೊಠಡಿಯಲ್ಲಿ 14 ಮತ ಎಣಿಕೆ ಟೇಬಲ್‍ಗಳನ್ನು ವ್ಯವಸ್ಥೆ ಮಾಡಲಾಗಿದ್ದು, 300ಕ್ಕೂ ಹೆಚ್ಚು ಮತಗಟ್ಟೆಗಳಿರುವ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚುವರಿ ಎಣಿಕೆ ಟೇಬಲ್‍ಗಳನ್ನು ವ್ಯವಸ್ಥೆ ಮಾಡಲಾಗುತ್ತದೆ.

ಕೆ.ಆರ್.ಪುರ, ಬ್ಯಾಟರಾಯನಪುರ, ದಾಸರಹಳ್ಳಿ ಕ್ಷೇತ್ರಗಳಿಗೆ 26 ಟೇಬಲ್‍ಗಳು, ಯಶವಂತಪುರ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ 24 ಟೇಬಲ್‍ಗಳು, ಸರ್ವಜ್ಞ ನಗರಕ್ಕೆ 21 ಟೇಬಲ್‍ಗಳು ಹಾಗೂ ಮಹದೇವಪುರ ಕ್ಷೇತ್ರಕ್ಕೆ 28 ಟೇಬಲ್‍ಗಳನ್ನು ವ್ಯವಸ್ಥೆ ಮಾಡಲಾಗುತ್ತದೆ.

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಇವಿಎಂ ಮತ ಎಣಿಕೆ ಮುಕ್ತಾಯವಾದ ನಂತರ ಪ್ರತಿ ವಿಧಾನಸಭಾ ಕ್ಷೇತ್ರವಾರು ಲಾಟರಿ ಮೂಲಕ ಐದು ಮತಗಟ್ಟೆಗಳ ವಿವಿ ಪ್ಯಾಟ್‍ಗಳನ್ನು ಆರಿಸಿ ವಿವಿ ಪ್ಯಾಟ್ ಸ್ಲಿಪ್‍ಗಳ ಎಣಿಕೆ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಇದಕ್ಕೆ ಅಗತ್ಯವಿರುವ ಪಾರದರ್ಶಕ ವಿವಿ ಪ್ಯಾಟ್ ಕೌಟಿಂಗ್ ಬೂತ್ ಮತ್ತು ಪಿಜನ್ ಹೋಲ್ ಮೆಷ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್‍ಶಂಕರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಎಂ.ಲೋಕೇಶ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಎಸ್.ಎಸ್.ನಕುಲ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಟಿ.ಸುನೀಲ್‍ಕುಮಾರ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೀಮಂತ್‍ಕುಮಾರ್ ಸಿಂಗ್ ಉಪಸ್ಥಿತರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin