ರಾಜ್ಯದಲ್ಲಿ ಐದು ದಿನ ಭಾರೀ ಮಳೆ ಸಾಧ್ಯತೆ..!
ಬೆಂಗಳೂರು,ಆ.31-ಕಳೆದೊಂದು ವಾರದಿಂದ ದುರ್ಬಲವಾಗಿದ್ದ ಮುಂಗಾರು ಮಳೆ, ನಿನ್ನೆಯಿಂದ ಮತ್ತೆ ಕ್ರಿಯಾಶೀಲವಾಗಿದೆ. ಇನ್ನೊಂದು ವಾರ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ನಿನ್ನೆ ರಾತ್ರಿ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಬೆಂಗಳೂರು, ರಾಮನಗರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ.
ಮಳೆ ಕೊರತೆಯಿಂದ ಒಣಗುತ್ತಿದ್ದ ಬೆಳೆಗಳಿಗೆ ಅನುಕೂಲಕರವಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ.5ರ ವರೆಗೂ ಕರಾವಳಿ, ದಕ್ಷಿಣ ಒಳನಾಡಿನ ಹಾಗೂ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ತಿಳಿಸಿದರು.
ಅಲ್ಲದೆ, ತೆಲಂಗಾಣದಿಂದ ತಮಿಳುನಾಡಿನವರೆಗೂ ಟ್ರಫ್ ನಿರ್ಮಾಣವಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು ಮಳೆ ಮುಂದುವರಿಯಲಿದೆ ಎಂದರು. ಹವಾ ಮುನ್ಸೂಚನೆ ಪ್ರಕಾರ ಐದಾರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗಲಿದೆ.
ಕರಾವಳಿಯಲ್ಲೂ ಮಳೆ ಮುಂದುವರೆಯಲಿದೆ. ಆದರೆ, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದರು.
ಆಗಸ್ಟ್ ನಲ್ಲಿ ಮಳೆ ಕೊರತೆ ಉಂಟಾಗಿದ್ದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕೃಷಿಗೆ ಹೆಚ್ಚು ಅನುಕೂಲವಾಗಿದೆ ಎಂದು ಹೇಳಿದರು.