ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಸಿಎಂಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.8- ಪಶ್ಚಿಮಘಟ್ಟ ಮತ್ತು ಮಲೆನಾಡು ಪ್ರದೇಶಗಳಿಗೆ ಮಾರಕವಾಗಿ ಪರಿಣಮಿಸಲಿರುವ ಡಾ.ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆ ಭಾಗದ ಶಾಸಕರು ಮನವಿ ಮಾಡಲಿದ್ದೇವೆ ಎಂದು ವಿಧಾನಸಭೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಕಲ್ಯಾಣ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.

ಡಾ.ಕಸ್ತೂರಿರಂಗನ್ ವರದಿಯ ಸ್ಥಿತಿಗತಿ ಕುರಿತಂತೆ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್‍ದವೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ನಂತರ ಎಂ.ಪಿ.ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ಡಾ.ಕಸ್ತೂರಿರಂಗನ್ ವರದಿ ಜಾರಿಯಾದರೆ ಮಲೆನಾಡು ಹಾಗೂ ಪಶ್ಚಿಮಘಟ್ಟಗಳ ಪ್ರದೇಶದಲ್ಲಿ ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಈ ವರದಿಯನ್ನು ತಿರಸ್ಕಾರ ಮಾಡುವಂತೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೆಕರ್ ಅವರಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದರು.

ಈ ಭಾಗದ ಎಲ್ಲಾ ಶಾಸಕರು ಮತ್ತು ಲೋಕಸಭಾ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದೇವೆ ಎಂದರು. ಕೂಡಲೇ ಸಿಎಂ ಅವರು ಪತ್ರ ಬರೆದು ಈ ಭಾಗದ ಜನರ ಆತಂಕವನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಬೇಕೆಂದು ಕೋರುತ್ತೇವೆ ಎಂದು ಹೇಳಿದರು.

ಈಗಾಗಲೇ ವಿಧಾನಸಭೆಯಲ್ಲೇ ವರದಿಯನ್ನು ಒಪ್ಪಲೇಬಾರದೆಂದು ಪಕ್ಷಭೇದ ಮರೆತು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ . ವರದಿಯನ್ನು ಅನುಷ್ಠಾನ ಮಾಡಿದರೆ ನೂರಾರು ವರ್ಷಗಳಿಂದ ವಾಸ ಮಾಡುತ್ತಿರುವ ಲಕ್ಷಾಂತರ ಕುಟುಂಬಗಳನ್ನು ಒಕ್ಕಲೆಬ್ಬಿಸಬೇಕಾಗುತ್ತದೆ. ಜತೆಗೆ ಮನೆ, ಮಠ, ಆಸ್ತಿ ಎಲ್ಲವನ್ನೂ ಕಳೆದುಕೊಂಡು ಬೀದಿಪಾಲಾಗುತ್ತಾರೆ. ಅವರನ್ನು ರಕ್ಷಣೆ ಮಾಡುವುದು ಯಾರು ಎಂದು ಪ್ರಶ್ನಿಸಿದರು.

ವರದಿ ಅನುಷ್ಠಾನ ಕುರಿತಂತೆ ರಾಷ್ಟ್ರೀಯ ಹಸಿರು ನ್ಯಾಯಾಲಯ (ಎನ್‍ಜಿಟಿ) ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿತ್ತು. ಇದರಂತೆ ಕೇಂದ್ರ ಸರ್ಕಾರ ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕೆಂದು ಎಲ್ಲಾ ರಾಜ್ಯಗಳಿಗೂ ಪತ್ರ ಬರೆದಿದೆ ಎಂದು ಹೇಳಿದರು. ಸಚಿವ ಸಂಪುಟ ಉಪ ಸಮಿತಿಯೂ ಕೂಡ ವರದಿಯನ್ನು ತಿರಸ್ಕರಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಇದರ ಆಧಾರದ ಮೇಲೆ ರಾಜ್ಯ ಸರ್ಕಾರ ವರದಿ ಅನುಷ್ಠಾನದಿಂದ ಆಗುವ ದುಷ್ಪರಿಣಾಮದ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಬೇಕೆಂದು ಆಗ್ರಹಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಸ್ಪಷ್ಟ ಅರಿವು ಇರುವುದರಿಂದ ವರದಿಯನ್ನು ಒಪ್ಪುವುದಿಲ್ಲ ಎಂಬ ಆಶಾಭಾವನೆ ಇಟ್ಟುಕೊಂಡಿದ್ದೇವೆ. ಕೂಡಲೇ ಕೇಂದ್ರ ಸಚಿವ ಜಾವಡೇಕರ್ ಅವರಿಗೆ ಪತ್ರ ಬರೆದು ರಾಜ್ಯದ ಅಭಿಪ್ರಾಯವನ್ನು ತಿಳಿಸಬೇಕೆಂದು ಕುಮಾರಸ್ವಾಮಿ ಹೇಳಿದರು.

Facebook Comments