ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಹೇಳಿದ್ದೇನೆ: ಶಾಸಕ ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.22- ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್‍ಗೆ ಬಿಟ್ಟದ್ದು. ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಪಕ್ಷದ ವೇದಿಕೆಯಲ್ಲೇ ಹೇಳಿದ್ದೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾವು, ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ. ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಯಾವ ಸಂದರ್ಭದಲ್ಲಿ ಏನು ನಿರ್ಧಾರ ಮಾಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

ನಾನು ದೆಹಲಿಗೆ ಭೇಟಿ ನೀಡಿದ ವೇಳೆ ಪಕ್ಷದ ರಾಷ್ಟ್ರೀಯ ಸಂಘಟನಾ ಸಹ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಕೆಲವು ಸಚಿವರನ್ನು ಸಂಪುಟದಿಂದ ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಲು ಕೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಹಾದಿ ಬೀದಿಯಲ್ಲಿ ಮಾತನಾಡಿದರೆ ಸ್ಥಾನಮಾನ ಸಿಗುವುದಿಲ್ಲ. ಸುಖಾ ಸುಮ್ಮನೆ ಬಡಿದುಕೊಂಡರೆ ಏನೂ ಸಿಗುವುದಿಲ್ಲ ಎಂದರು. ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ ಎಂಬುದು ನಮಗೆ ಗೊತ್ತಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ಬಾರಿ ತಮಗೆ ಅವಕಾಶ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ತಪ್ಪೇನಿದೆ: ಕನ್ನಡ ಪರ ಸಂಘಟನೆಗಳ ಕುರಿತಂತೆ ಮಾಜಿ ಸಚಿವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ರೇಣುಕಾಚಾರ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸಿಎಂ ಯಡಿಯೂರಪ್ಪನವರು ಕನ್ನಡ ಭಾಷೆ ಬಗ್ಗೆ ಇಟ್ಟುಕೊಂಡಿರುವ ಬದ್ಧತೆಯನ್ನು ಪ್ರಶ್ನಿಸುವಂತಿಲ್ಲ. ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ ಎಂದರು.

Facebook Comments