ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಆರಂಭದ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.26- ಆದಿಚುಂಚನಗಿರಿ ಮಠದ ಆಶಯದಂತೆ ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಆರಂಭಿಸುವ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು. ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಬಿಜಿಎಸ್ ವಲ್ರ್ಡ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಗಾನಯೋಗಿ ಭೈರವಿ ಕೆಂಪೇಗೌಡ ಸಂಗೀತ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದೆ. ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್ ವತಿಯಿಂದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಒಂದು ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡುವುದಾಗಿ ಇದೇ ಸಂದರ್ಭದಲ್ಲಿ ಗೋಪಾಲಯ್ಯ ಘೋಷಿಸಿದರು.  ಕಾರ್ಯಕ್ರಮ ಉದ್ಘಾಟಿಸಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಂಗೀತಕ್ಕೆ ಜಾತಿ, ಧರ್ಮಗಳ ಭೇದವಿಲ್ಲ, ವೈಜ್ಞಾನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಂಗೀತ ಆಲಿಸಲು ವಿಶಾಲ ಕಿವಿ ಹಾಗೂ ಮನಸ್ಸುಗಳನ್ನು ಒಂದೆಡೆ ಸೇರಿಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಗೀತ ವಿದ್ವಾಂಸರಾದ ಬಿ.ರಘುರಾಮ್, ಡಾ.ಹಂಸಿನಿ ನಾಗೇಂದ್ರ, ಗೋಪಾಲಕೃಷ್ಣ, ಎ.ಎಸ್.ಎನ್.ಸ್ವಾಮಿ, ಸಿ.ರಾಮದಾಸ್, ಸಿ.ಚಲುವರಾಜು, ಎ.ಚಂದನ್‍ಕುಮಾರ್ ಅವರುಗಳನ್ನು ಸನ್ಮಾನಿಸಲಾಯಿತು. ವಿಜಯನಗರ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳು, ವಿದ್ವಾನ್ ಡಾ.ಆರ್.ಕೆ.ಪದ್ಮನಾಭ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

Facebook Comments