ಹಿರೇನಾಗವಲ್ಲಿ ಸ್ಫೋಟದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ನಿರ್ದಾಕ್ಷಿಣ್ಯ ಕ್ರಮ : ನಿರಾಣಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಫೆ.23- ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲಿಟಿನ್ ಕಡ್ಡಿ ಸ್ಫೋಟ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ, ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಪುನಃ ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ವಸ್ತುಸ್ಥಿತಿ ಪರಿಶೀಲಿಸುತ್ತಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿ, ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಸಹ ಮಾಹಿತಿ ನೀಡಲಾಗಿದೆ. ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಸೂಕ್ತವಾದ ಚಿಕಿತ್ಸೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.ನಾನು ವೈಯಕ್ತಿಕ ಕಾರಣಗಳಿಗಾಗಿ ನವದೆಹಲಿಗೆ ಬಂದಿದ್ದೇನೆ. ಕ್ಷಣ ಕ್ಷಣಕ್ಕೂ ಎಲ್ಲ ವಿವರಗಳನ್ನು ಪಡೆಯುತ್ತಿದ್ದೇನೆ.

ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ನನಗೆ ಬಂದಿರುವ ಮಾಹಿತಿ ಪ್ರಕಾರ ಇಂದಿನ ಘಟನೆಗೆ ಜಿಲಿಟಿನ್ ಕಡ್ಡಿಗಳನ್ನು ಅನೇಕ ದಿನಗಳ ಹಿಂದೆ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿ ಬಂದಿದೆ. ಇವುಗಳನ್ನು ಬೇರೆ ಬೇರೆ ಸಂಗ್ರಹಿಸಿಡುವುದರಿಂದ ಅಧಿಕಾರಿಗಳಿಗೆ ಪತ್ತೆ ಹಚ್ಚುವುದು ಕೂಡ ಕಷ್ಟವಾಗುತ್ತದೆ ಎಂದರು.

ಮುಂದೆ ಈ ರೀತಿ ನಡೆಯದಂತೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ರಾಜ್ಯದಲ್ಲಿ ಕಲ್ಲು ಗಣಿಗಾರಿಕೆ ನಡೆಸುವ ಸಂಬಂಧ ಕಾರ್ಮಿಕರಿಗೆ ತರಬೇತಿ ನೀಡುವ ಪ್ರಸ್ತಾವನೆಯು ಇದೆ ಎಂದು ತಿಳಿಸಿದರು.ಶಿವಮೊಗ್ಗ ಸೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ.

ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ.ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮತ್ತೊಮ್ಮೆ ಗುಡುಗಿದರು.

Facebook Comments

Sri Raghav

Admin