ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳಿಂದ ಗೆಲ್ಲುತ್ತಾರೆ : ನಿರಾಣಿ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ,ಏ.11- ಪ್ರತಿಪಕ್ಷಗಳು ಏನೇ ಆರೋಪ ಮಾಡಿದರೂ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಇಂದು ಸಚಿವರಾದ ಬಿ.ಸಿ.ಪಾಟೀಲ್, ಆನಂದ್ ಸಿಂಗ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ವಿರೋಧ ಪಕ್ಷ ಕಾಂಗ್ರೆಸ್ ನಾಯಕರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬೆಳಗಾವಿ ಲೋಕಸಭೆ , ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು ಶತಸಿದ್ದ. ರಾಜ್ಯದ ಜನತೆ ಬಿಜೆಪಿಯನ್ನು ಒಪ್ಪಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಅತ್ಯಂತ ಕಠಿಣ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನತೆಯ ವಿಶ್ವಾಸ ಗಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಪ್ರವಾಹ, ಬರ ಹಾಗೂ ಕೋವಿಡ್ ಸಂಕಷ್ಟದಲ್ಲೂ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಉಂಟಾಗದಂತೆ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಏನೂ ಮಾಡಲಿಲ್ಲ. ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿಕೊಂಡು ತಿರುಗುತ್ತಿದ್ದಾರೆ. ಸಾಲು ಸಾಲು ಸೋಲು ಅವರಿಗೆ ಹತಾಶೆ ತಂದಿದೆ. ಈ ಬಾರಿಯೂ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಪರಾಭವಗೊಳ್ಳುವುದು ಖಚಿತ ಎಂದು ಭವಿಷ್ಯ ನುಡಿದರು.

ಪ್ರತಿಯೊಬ್ಬ ಸಚಿವರು ತಮ್ಮ ತಮ್ಮ ಇಲಾಖೆಗಳಲ್ಲಿ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ನಮ್ಮ ಇಲಾಖೆಗಳಲ್ಲಿ ಯಾರೂ ಕೂಡ ಹಸ್ತಕ್ಷೇಪ ಮಾಡುತ್ತಿಲ್ಲ. ನಾವು ಮುಕ್ತವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಮಾಡುತ್ತಿದ್ದೇನೆ. ಕೇವಲ ಘೋಷಣೆಗಳನ್ನಾಗಲಿ, ಭರವಸೆಗಳನ್ನಾಗಲಿ ನೀಡುತ್ತಿಲ್ಲ. ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದೇವೆ ಎಂದರು.

ಶೀಘ್ರದಲ್ಲೇ ಮರಳು ನೀತಿಯನ್ನು ಜಾರಿ ಮಾಡಲಾಗುವುದು. ಇದರಿಂದ ಅನೇಕರಿಗೆ ಅನುಕೂಲವಾಗಲಿದೆ. ದೇಶಕ್ಕೆ ಮಾದರಿಯಾದ ನೀತಿಯನ್ನು ಜಾರಿ ಮಾಡಲಿದ್ದೇವೆ ಎಂದು ಹೇಳಿದರು. ಗಣಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಮವಸ್ತ್ರವನ್ನು ನೀಡುವ ಚಿಂತನೆಯಿದೆ. ಪೊಲೀಸ್ ಇಲಾಖೆಯ ಮಾದರಿಯಲ್ಲಿ ನಮ್ಮ ಇಲಾಖೆಯ ಸಿಬ್ಬಂದಿಗೂ ವಿತರಣೆ ಮಾಡಲಾಗುವುದು. ಇದರಿಂದಾಗಿ ಸಿಬ್ಬಂದಿಯನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದು ನಿರಾಣಿ ಅವರು ಅಭಿಪ್ರಾಯಪಟ್ಟರು.

ಹತ್ತು ಲಕ್ಷಕ್ಕಿಂತ ಕಡಿಮೆ ಮೊತ್ತದಲ್ಲಿ ಮನೆ ಕಟ್ಟುವವರಿಗೆ ಉಚಿತ ಮರಳು ಒದಗಿಸಲಾಗುವುದು. 10 ಲಕ್ಷಕ್ಕಿಂತ ಹೆಚ್ಚಿನ ಮೊತ್ತದಲ್ಲಿ ಮನೆ ಕಟ್ಟಿಸಿದರೆ ಅಂಥವರಿಗೆ ಪ್ರತ್ಯೇಕ ದರವನ್ನು ನಿಗದಿಪಡಿಸಲಾಗುವುದು. ಈ ಎಲ್ಲಾ ಅಂಶಗಳು ನೂತನ ಮರಳು ನೀತಿಯಲ್ಲಿ ಇರಲಿವೆ ಎಂದರು.

ಈಗಾಗಲೇ ನೂತನ ಮರಳು ನೀತಿಯು ಸಿದ್ದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಲಾಗುವುದು. ಸಾರ್ವಜನಿಕರಿಗೆ ಇದರಿಂದ ಅನೇಕ ಲಾಭಗಳಿವೆ ಎಂದು ತಿಳಿಸಿದರು.

Facebook Comments

Sri Raghav

Admin