ಈ ಬಾರಿ ದುಂದುವೆಚ್ಚವಿಲ್ಲದೆ ಸಿಂಪಲ್ ದಸರಾ, ಎಸ್.ಎಲ್.ಭೈರಪ್ಪನವರಿಂದ ಉದ್ಘಾಟನೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆಗಸ್ಟ್ 14 : ನಾಡಹಬ್ಬ ಮೈಸೂರು ದಸರಾ ಈ ಬಾರಿ ದುಂದುವೆಚ್ಚವಿಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೈಸೂರು ದಸರಾ ಆಚರಣೆ ಕುರಿತು ಇಂದು ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮೈಸೂರು ದಸರಾ ನಮ್ಮ ನಾಡಿನ ಸಂಸ್ಕøತಿ, ಪರಂಪರೆಯನ್ನು ಎತ್ತಿ ಹಿಡಿಯುವ ಹಬ್ಬ. ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡುತ್ತಿದೆ. ಈ ಸಂದರ್ಭದಲ್ಲಿ ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ.

ಇದರಿಂದ ಈ ಭಾಗದ ಆರ್ಥಿಕತೆಗೆ ಅನುಕೂಲವಾಗುತ್ತಿದೆ ಎಂದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮೈಸೂರು ದಸರಾವನ್ನು ದುಂದು ವೆಚ್ಚವಿಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಬೇಕು ಎಂದರು.

# ಸಾಹಿತಿ ಎಸ್.ಎಲ್.ಭೈರಪ್ಪನವರಿಂದ ಮೈಸೂರು ದಸರಾ ಉದ್ಘಾಟನೆ:
ನಾಡಿನ ಪ್ರಸಿದ್ಧ ಸಾಹಿತಿ ಎಸ್.ಎಲ್.ಭೈರಪ್ಪ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ನೆರವೇರಿಸಬೇಕು ಎನ್ನುವುದು ಎಲ್ಲರ ಒಮ್ಮತದ ಅಭಿಪ್ರಾಯವಾಗಿದ್ದು, ಎಸ್.ಎಲ್ ಭೈರಪ್ಪ ಅವರನ್ನು ಉದ್ಘಾಟನೆಗೆ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜರ್ಷಿ ಜಯಚಾಮರಾಜ ಒಡೆಯರ್‍ರವರ ಜನ್ಮಶತಮಾನೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ದಸರಾ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ರೂಪಿಸಿ, ವ್ಯವಸ್ಥಿತವಾಗಿ ಆಯೋಜಿಸಲು ಪೂರ್ವ ಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದಸರಾ ಆಯೋಜನೆಗೆ ಈ ವರ್ಷ 20.50 ಕೋಟಿ ರೂ.ಗಳ ಅನುದಾನ ನೀಡಲಾಗುವುದು, ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಹೊರರಾಜ್ಯಗಳ ಕಲಾವಿದರನ್ನು ಆಹ್ವಾನಿಸದೇ, ಕೇವಲ ರಾಜ್ಯದ ಪ್ರತಿಭಾವಂತ ಕಲಾವಿದರನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ ಪ್ರಸಾದ್, ಶಾಸಕ ತನ್ವೀರ್ ಸೇಠ್, ರಾಮ್ ದಾಸ್, ಎನ್.ಮಹೇಶ್, ಯತೀಂದ್ರ. ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ನಾಗರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ.ಸಿ.ಕಳಸದ್ ಹಾಗೂ ಮೈಸೂರು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin