ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.28- ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ಜನಪರ ಆಡಳಿತ ನೀಡುವುದು ನನ್ನ ಮೊದಲ ಗುರಿ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯರು, ಶಾಸಕರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕರ್ನಾಟಕವನ್ನು ಅಭಿವೃದ್ಧಿಪಡಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅನೇಕ ಸವಾಲುಗಳು ಎದುರಾದವು. ಎರಡು ವರ್ಷ ನೆರೆ ಹಾವಳಿ ಉಂಟಾಯಿತು. ನಂತರ ಕೋವಿಡ್ ಮಹಾಮಾರಿಯ ದಾಳಿ, ಈಗ ಮತ್ತೆ ಪ್ರವಾಹ ಇವೆಲ್ಲವನ್ನು ಎದುರಿಸುವುದು ಸವಾಲೇ ಆಯಿತು. ಮುಂದೆಯೂ ಸವಾಲುಗಳು ಎದುರಾಗಲಿವೆ. ಅದನ್ನು ಕೂಡ ನಾವು ಎದುರಿಸುತ್ತೇವೆ ಎಂದು ಹೇಳಿದರು.

ಆರ್ಥಿಕ, ಸಾಮಾಜಿಕ, ಪ್ರಾದೇಶಿಕ, ಅಸಮತೋಲನ ಇದೆ. ಇದೆಲ್ಲವನ್ನು ಮೆಟ್ಟಿ ನಿಂತು ಆಡಳಿತ ನಡೆಸುತ್ತೇನೆ. ಬಡವರು, ರೈತರು, ಕೂಲಿ ಕಾರ್ಮಿಕರು, ದೀನ ದಲಿತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲರಿಗೂ ಸಾಮಾಜಿಕ ನ್ಯಾಯ , ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ , ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ಮುಖಂಡರು , ಶಾಸಕರು ಸೇರಿದಂತೆ ಎಲ್ಲರಿಗೂ ಬಸವರಾಜ ಬೊಮ್ಮಾಯಿ ಅವರು ಕೃತಜ್ಞತೆ ಹೇಳಿದರು.

Facebook Comments