ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಮೋಜು ಮಸ್ತಿ ಬಿಬಿಎಂಪಿ ಬ್ರೇಕ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.12- ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಈ ವರ್ಷ ನಗರದ ಎಂ.ಜಿ.ರಸ್ತೆಯಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ತೀರ್ಮಾನಿಸಿದೆ. ಪ್ರತಿ ವರ್ಷ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾವಿರಾರು ಮಂದಿ ಎಂ.ಜಿ.ರಸ್ತೆಯಲ್ಲಿ ಜಮಾಯಿಸಿ ಮೋಜು ಮಸ್ತಿ ನಡೆಸುವ ಮೂಲಕ ಹೊಸ ವರ್ಷಕ್ಕೆ ಸ್ವಾಗತ ಕೋರುವುದು ವಿಶೇಷವಾಗಿತ್ತು.

ಆದರೆ ಈ ಬಾರಿ ಕೊರೊನಾ ಸೋಂಕಿನ ಭೀತಿಯಿಂದ ಎಂ.ಜಿ.ರಸ್ತೆಯ ಹೊಸ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದರೂ ಎರಡನೆ ಹಂತದ ಭೀತಿ ಇರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಅವಕಾಶ ನೀಡಬಾರದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ.

ಇದರ ಬೆನ್ನಲ್ಲೇ ಚಳಿಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಡಿ.31ರ ಮಧ್ಯರಾತ್ರಿಯ ಸಂಭ್ರಮಾಚರಣೆಗೆ ಅವಕಾಶ ನೀಡಿದರೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವರ್ಷಾಚರಣೆಗೆ ತಡೆ ನೀಡುವ ಕುರಿತಂತೆ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬಿಬಿಎಂಪಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಈ ಕುರಿತಂತೆ ಪೊಲೀಸ್ ಇಲಾಖೆಯೊಂದಿಗೆ ಮಾತುಕತೆ ನಡೆಸಿ ತಜ್ಞರ ವರದಿಯನ್ನು ಸರ್ಕಾರದ ಗಮನಕ್ಕೆ ತಂದು ವರ್ಷಾಚರಣೆಗೆ ಬ್ರೇಕ್ ಹಾಕುವುದು ಬಿಬಿಎಂಪಿ ಪ್ಲ್ಯಾನ್ ಆಗಿದೆ. ಬೀದಿಗೆ ಬಂದು ಸಂಭ್ರಮಾಚರಣೆ ನಡೆಸಿ ಕೊರೊನಾ ಮಹಾಮಾರಿಯನ್ನು ಮೈಮೇಲೆ ಎಳೆದುಕೊಳ್ಳುವ ಬದಲು ಮನೆಯಲ್ಲೇ ಸರಳವಾಗಿ ಆಚರಣೆ ಮಾಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ.

Facebook Comments