ಸಂಜೆ ವೇಳೆಗೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ, ಕರಾವಳಿ ಜಿಲ್ಲೆಗಳಲ್ಲಿ ಹೈಅಲರ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.2-ಇಂದು ಸಂಜೆ ವೇಳೆಗೆ ಮಹಾರಾಷ್ಟ್ರದ ಪಶ್ಚಿಮ ಕರಾವಳಿ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತೆಯಾಗಿ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಎಸ್‍ಡಿಆರ್‍ಎಫ್, ಕರಾವಳಿ ಪಡೆ, ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರಿಗೆ ಈಗಾಗಲೇ ಸೂಚನೆ ಕೊಡಲಾಗಿದ್ದು, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಮಲೆನಾಡು ಜಿಲ್ಲೆಗಳಾದ ಮಡಿಕೇರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಕಡೆ ಈಗಾಗಲೇ ಜಿಲ್ಲಾಡಳಿತ, ಎಸ್‍ಡಿಆರ್‍ಎಫ್, ಕರಾವಳಿ ಪಡೆ ಸೇರಿದಂತೆ ಮತ್ತಿತರ ಸಿಬ್ಬಂದಿ ಕಾರ್ಯೋನ್ಮುಖವಾಗಿದೆ.

ಇಂದು ಮುಂಬೈನ ಪಶ್ಚಿಮ ಕರಾವಳಿಯಿಂದ ಸುಮಾರು 125 ಕಿ.ಮೀ ವೇಗದಲ್ಲಿ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿ, ಎನ್‍ಡಿಆರ್‍ಎಫ್, ಭೂಸೇನೆ, ವಾಯುಸೇನೆ, ನೌಕಾ ಪಡೆಯ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ಕೊಟ್ಟಿದ್ದರು.

ಮಹಾರಾಷ್ಟ್ರದಲ್ಲಿ ನಿಸರ್ಗ ಚಂಡಮಾರುತ ಅಪ್ಪಳಿಸಿದರೆ ಕರ್ನಾಟಕದ ಮೇಲೂ ಪರಿಣಾಮ ಬೀರಬಹುದೆಂಬ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದೆ.

ಸದ್ಯಕ್ಕೆ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧ ಹೇರಲಾಗಿದ್ದು, ಲಾಕ್‍ಡೌನ್ ಜಾರಿ ಇರುವ ಕಾರಣ ಸಮುದ್ರ ತೀರಗಳಿಗೆ ಸಾರ್ವಜನಿಕ ಪ್ರವೇಶ ಇಲ್ಲದಿರುವುದು ಜಿಲ್ಲಾಡಳಿತಕ್ಕೆ ನೆಮ್ಮದಿ ತಂದಿದೆ. ಉಳಿದಂತೆ ಕರಾವಳಿ ತೀರಾಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲಾಡಳಿತವು ದಿನದ 24 ಗಂಟೆಯೂ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ವಸನ್ನದರಾಗಿರಬೇಕು. ಎಸ್‍ಡಿಆರ್‍ಎಫ್ , ಕರಾವಳಿ ಪಡೆ ಸೇರಿದಂತೆ ಮತ್ತಿತರ ರಕ್ಷಣಾ ತಂಡಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಸಿಎಂ ಸೂಚನೆ ಕೊಟ್ಟಿದ್ದಾರೆ.

# ನಾನಾ ಕಡೆ ಮಳೆ:
ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ.  ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು.

ಇತ್ತ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ಪರದಾಡಿದ್ದು, ಮುಂಗಾರು ಬಿತ್ತನೆಗೆ ರೈತರು ಸಜ್ಜಾಗಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಗುಡುಗು, ಸಿಡಿಲು ಗಾಳಿ ಸಹಿತ ಭಾರೀ ಮಳೆಯಾಗಿದೆ. ಸತತ ಅರ್ಧಗಂಟೆಯಿಂದ ಸುರಿದ ಮಳೆಯಿಂದಾಗಿ ಅಗಸ್ತ್ಯ ತೀರ್ಥ ಹೊಂಡ ಮೈತುಂಬಿ ನಿಂತಿದೆ. ಅಕ್ಕ ತಂಗಿ ಜಲಪಾತದಲ್ಲಿ ನೀರು ಬೋರ್ಗರೆಯುತ್ತಿದೆ. ಮತ್ತೊಂದೆಡೆ ನವನಗರ ಮೂರ್ನಾಲ್ಕು ಮನೆಗಳಿಗೆ ನೀರು ನುಗ್ಗಿದೆ.

ಬೀಳಗಿಯ ಗಾಂಧಿನಗರದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಬೆಳಗಾವಿ, ಹಾವೇರಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸಲಿದೆಯೇ ಎಂಬ ಆತಂಕ ಎದುರಾಗಿದೆ.

Facebook Comments