ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23ರಂದು ನಡೆದ ಸಭೆಯ ತೀರ್ಮಾನದಂತೆ, ನವೆಂಬರ್ 17 ರಿಂದ ಮೆಟ್ರಿಕ್ ನಂತರದ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇದಕ್ಕಾಗಿ ಇಲಾಖೆಯೂ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಕಾರಣ ಕಳೆದ ಮಾರ್ಚ್ ತಿಂಗಳಿನಿಂದ ಶಾಲಾ – ಕಾಲೇಜುಗಳನ್ನು ಮುಚ್ಚಲಾಗಿತ್ತು. ಇದೀಗ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕಾರಣ ಇದೇ 17 ರಿಂದ ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.

ಈ ಪ್ರಕಾರ ಮೊದಲ ಹಂತದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತ ವೈದ್ಯಕೀಯ, ಡಿಪ್ಲೊಮೊ ಸೇರಿದಂತೆ ಮತ್ತಿತರ ಕಾಲೇಜುಗಳನ್ನು ಆರಂಭಿಸಲು ಸಜ್ಜಾಗಿದೆ. ಕಾಲೇಜುಗಳಿಗೆ ವಿದ್ಯಾರ್ಥಿಗಳು ಪೋಷಕರ ಅನುಮತಿ ಪಡೆದು ಹಾಜರಾಗಲು ಅವಕಾಶ ನೀಡಲಾಗಿದೆ.

ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಯವಾಗಿ ಕೋವಿಡ್ ಪರೀಕ್ಷೆ ನಡೆಸುವುದು, ವೈದ್ಯರ ಪ್ರಮಾಣ ಪತ್ರ, ಕಾಲೇಜಿನಲ್ಲಿ ಸಾಮಾಜಿಕ ಆಂತರ, ಸ್ಯಾನಿಟೈಜರ್ ಬಳಕೆ, ಮನೆಯಿಂದಲೇ ಉಟ- ತಿಂಡಿ ತರುವುದು, ಕ್ಯಾಂಟೀನ್ ತೆರೆಯದಿರುವುದು ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಸರ್ಕಾರ ರೂಪಿಸಿದೆ. ಕಾಲೇಜುಗಳು ಪ್ರಾರಂಭವಾಗುತ್ತಿರುವ ಕಾರಣ ಹಂತ ಹಂತವಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಸರ್ಕಾರ ಸಿದ್ದತೆ ನಡೆಸಿದೆ.

Facebook Comments