ಕಳೆದ 8 ದಿನಗಳಿಂದ ಏರುತ್ತಲೇ ಇದೆ ಪೆಟ್ರೋಲ್- ಡೀಸೆಲ್ ಬೆಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.14- ಕಳೆದ ಎಂಟು ದಿನಗಳಿಂದ ಸತತವಾಗಿ ಡೀಸೆಲ್, ಪೆಟ್ರೋಲ್ ದರ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಪೆಟ್ರೋಲ್ ದರದಲ್ಲಿ 62 ಪೈಸೆ ಹಾಗೂ ಡೀಸೆಲ್ ದರದಲ್ಲಿ 64 ಪೈಸೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಬಿಗ್ ಶಾಕ್ ಆಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ತೈಲ ಕಂಪೆನಿಗಳು ಇಂಧನ ಬೆಲೆಯನ್ನು ಹೆಚ್ಚಳ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈಗಾಗಲೇ ಲಾಕ್‍ಡೌನ್‍ನಿಂದ ತತ್ತರಿಸಿರುವ ಜನರಿಗೆ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ.

ತೈಲ ಬೆಲೆ ಹೆಚ್ಚಳದಿಂದ ಸರಕು-ಸಾಗಣೆ ಮೇಲೆ ಪರಿಣಾಮ ಬೀರಲಿದ್ದು, ಅಗತ್ಯ ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ 8 ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 4ರೂ.ವರೆಗೂ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 75.78ರೂ., ಡೀಸೆಲ್ 74.03 ರೂ. ಇದ್ದು, ಬೆಂಗಳೂರಿನಲ್ಲಿ ಪೆಟ್ರೋಲ್ 78.23ರೂ., ಡೀಸೆಲ್ 70.39ರೂ. ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Facebook Comments

Sri Raghav

Admin