ಅಮೆರಿಕ ವಿದೇಶಾಂಗ ಸಚಿವ ಪೊಂಪಿಯೋ-ಮೋದಿ ಭೇಟಿ, ಮಹತ್ವದ ದ್ವಿಪಕ್ಷೀಯ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.26-ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪಿಯೋ ಇಂದು ಬೆಳಗ್ಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಕುರಿತು ಮಹತ್ವದ ಚರ್ಚೆ ನಡೆಸಿದರು.

ನಿನ್ನೆ ತಡರಾತ್ರಿ ಸೌದಿ ಅರೇಬಿಯಾದಿಂದ ನವದೆಹಲಿಗೆ ಆಗಮಿಸಿದ ಪೊಂಪಿಯೋ ಬೆಳಗ್ಗೆ ಪ್ರಧಾನಿಯವರನ್ನು ಭೇಟಿ ಮಾಡಿದರು. ಇಂಡೋ-ಅಮೆರಿಕ ದೇಶಗಳ ನಡುವಣ ಬಾಂಧವ್ಯವನ್ನು ಮತ್ತಷ್ಟು ಬಲಗೊಳಿಸುವ ಕುರಿತು ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದರು.

ಈ ಸಮಾಲೋಚನೆ ಫಲಪ್ರದವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್‍ಕುಮಾರ್ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ. ಎರಡೂ ದೇಶಗಳ ನಡುವೆ ರಕ್ಷಣೆ ಮತ್ತು ಭದ್ರತಾ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವಿಕೆ, ಈ ನಿಟ್ಟಿನಲ್ಲಿ ಇಂಡೋ-ಅಮೆರಿಕ ಬಾಂಧವ್ಯವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಮೋದಿ-ಪೊಂಪಿಯೋ ಚರ್ಚಿಸಿದರು ಎಂದು ಅವರು ಹೇಳಿದ್ದಾರೆ.

ಮೋದಿ ಭೇಟಿ ನಂತರ ಮಧ್ಯಾಹ್ನ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಭೋಜನ ಕೂಟದಲ್ಲಿ ಪಾಲ್ಗೊಂಡರು. ನಂತರ ಪೊಂಪಿಯೋ ವಿದೇಶಾಂಗ ವ್ಯವಹಾರಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.

ರಷ್ಯಾ ಜೊತೆ ಭಾರತ ಟ್ರಾಯಾಂಫ್ ಕ್ಷಿಪಣಿ ಖರೀದಿ ಒಪ್ಪಂದದ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಅಮೆರಿಕಾ ಆ ದೇಶದೊಂದಿಗಿನ ಒಡಂಬಡಿಕೆಯನ್ನು ರದ್ದುಗೊಳಿಸುವಂತೆ ದೆಹಲಿ ಮೇಲೆ ವ್ಯಾಪಕ ಒತ್ತಡ ಹೇರುತ್ತಿರುವ ಸಂದರ್ಭದಲ್ಲೇ ಪೊಂಪಿಯೋ ಭೇಟಿ ಮಹತ್ವ ಪಡೆದುಕೊಂಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin