ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್‍ನತ್ತ ಮುಖ ಮಾಡಲ್ಲ : ಪ್ರತಾಪ್ ಗೌಡ ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.23- ನಮಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಇದುದ್ದರಿಂದಲೇ ಪಕ್ಷವನ್ನು ಬಿಟ್ಟು ಬಂದಿದ್ದೇವೆ. ಯಾವುದೇ ಕಾರಣಕ್ಕೂ ಪುನಃ ಆ ಪಕ್ಷದತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅಸಮಾಧಾನ ಇದುದ್ದರಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದೆವು. ಮತ್ತೆ ಕಾಂಗ್ರೆಸ್‍ಗೆ ಹೋಗುವ ಮಾತು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.

ನಾವು ಸಿದ್ದರಾಮಯ್ಯನವರಿಗೆ ಅಧಿಕಾರ ಸಿಗಲಿ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಂದಿಲ್ಲ. ನ್ಯಾಯಾಲಯದ ತೀರ್ಪು ಬಂದನಂತರ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲರೂ ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಂತರ ತೀರ್ಮಾನ ಪ್ರಕಟಿಸುತ್ತೇವೆ ಎಂದರು. ಈವರೆಗೂ ನಾವು ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ. ಸುಪ್ರೀಂಕೋರ್ಟ್‍ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಅಂತಿಮ ತೀರ್ಪು ಬರುವವರೆಗೂ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಉಪಚುನಾವಣೆಯಲ್ಲಿ ನಮಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ , ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಸೇರಿದಂತೆ ಹಲವರನ್ನು ಕೇಳಿದ್ದೇವೆ. ನಮಗೆ ಎಲ್ಲರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಬಸವನಗೌಡ ತುರುವಿ ಹಾಳಗೆ ಕಾಡ ಅಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ್ ಗೌಡ ಪಾಟೀಲ್, ಅವರು ಉಪಚುನಾವಣೆಗೆ ಮಸ್ಕಿಯಿಂದ ಸ್ಫರ್ಧಿಸಲು ಟಿಕೆಟ್ ಕೇಳಿದ್ದಾರೆ. ಬಿಜೆಪಿ ಮುಖಂಡರು ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಅವರು ಟಿಕೆಟ್ ಕೇಳಿರುವುದರಲ್ಲಿ ತಪ್ಪೇನಿಲ್ಲ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin