ಬೆಲೆ ಏರಿಕೆ ಚರ್ಚೆಗೆ ಅವಕಾಶ ನೀಡಿ : ಕಾಂಗ್ರೆಸ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.14- ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಕಬ್ಬಿಣ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಚರ್ಚೆ ನಡೆಸಲು ಅವಕಾಶ ನೀಡುವಂತೆ ವಿಧಾನ ಪರಿಷತ್‍ನಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಮನವಿ ಮಾಡಿದೆ. ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು, ಮಧ್ಯಮ ವರ್ಗದ ಕುಟುಂಬಗಳು ತೀವ್ರ ಸಂಕಷ್ಕಕ್ಕೆ ಒಳಗಾಗಿವೆ. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿದರು.

ಬೆಲೆ ಏರಿಕೆ ಕುರಿತು ನಿಯಮ 59ರ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ದಿನೇ ದಿನೇ ಬೆಲೆ ಗಗನಕ್ಕೇರುತ್ತಿದೆ. ಇದು ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಕಬ್ಬಿಣ, ಸಿಮೇಂಟ್ ದರ ಏರಿಕೆಯಿಂದ ಬಡವರು ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಸಮಧಾನ ವ್ಯಕ್ತ ಪಡಿಸಿದರು.

ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸೂಚನೆಯನ್ನು ನಿಲುವಳಿ ಬದಲು ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆ ಮಾಡಲು ನಿಯಮ 69ರ ಅಡಿ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು.

Facebook Comments