ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.9- ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ನಗರದ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಎತ್ತಿನಗಾಡಿ ಓಡಿಸಿ ಮತ್ತು ಸೌದೆ ಬಳಸಿ ಅಡುಗೆ ಮಾಡುವ ಮೂಲಕ ಕಾಂಗ್ರೆಸಿಗರು ತೈಲ ಬೆಲೆ ಏರಿಕೆಯನ್ನು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಜನಸಾಮಾನ್ಯರು ನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬದಲಾಗಿ ಕಾಪೆರ್ರೇಟ್ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಕಾನೂನುಗಳನ್ನು ಜಾರಿಗೊಳಿಸುವಲ್ಲಿ ಬ್ಯುಸಿಯಾಗಿದೆ. ಭಾವನಾತ್ಮಕ ವಿಷಯಗಳನ್ನು ರಾಜಕಾರಣ ಮಾಡಿ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್‍ಬೆಲೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದ್ದರೂ ಕೂಡ ಸ್ಥಳೀಯ ತೆರಿಗೆಗಳು ಮತ್ತು ಅಬಕಾರಿ ಸುಂಕಗಳನ್ನು ಹೆಚ್ಚು ಮಾಡಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90ರೂ. ದಾಟುವಂತೆ ಮಾಡಲಾಗಿದೆ. ಡೀಸೆಲ್, ಪೆಟ್ರೋಲ್ ಜನಸಾಮಾನ್ಯರ ಕೈಗೆಟುಕದ ರೀತಿಯಲ್ಲಿ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Facebook Comments