ನೀರಸ ಬಂದ್ : ರೈತ, ಕಾರ್ಮಿಕ, ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.27- ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟ ಭಾರತ್ ಬಂದ್ ಬೆಂಬಲಿಸಿ ಇಂದು ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ, ಕಾರ್ಮಿಕ ಸಂಘಟನೆಗಳು ನಡೆಸಿದ ಕರ್ನಾಟಕ ಬಂದ್ ನೀರಸವಾಗಿತ್ತು.

ಸಾರ್ವಜನಿಕರಿಗೆ ಬಂದ್ ಬಿಸಿ ಅಷ್ಟಾಗಿ ತಟ್ಟದಿದ್ದರೂ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಪ್ರತಿಭಟನೆ, ಧರಣಿ, ಬಸ್ ತಡೆ, ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಸಾರಿಗೆ ಸಂಚಾರ ಎಂದಿನಂತಿತ್ತು. ವ್ಯಾಪಾರ ವಹಿವಾಟು ಸಹಜವಾಗಿತ್ತು. ಅಂಗಡಿಮುಂಗಟ್ಟುಗಳು ತೆರೆದಿದ್ದವು. ಶಾಲಾ, ಕಾಲೇಜುಗಳು ಎಂದಿನಂತೆ ನಡೆದವು.

ವಿವಿಧ ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ವಿವಿಧ ರೀತಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದವು. ಬೆಂಗಳೂರಿನಲ್ಲಿ ರೈತ ಸಂಘಟನೆಯವರು ತರಕಾರಿ ಮಾರುವ ಮೂಲಕ ಪ್ರತಿಭಟಿಸಿದರೆ, ಚಿಕ್ಕಬಳ್ಳಾಪುರದಲ್ಲಿ ಹೂಗಳನ್ನು ರಸ್ತೆಗೆ ಸುರಿದು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ಎಮ್ಮೆಗಳನ್ನು ರಸ್ತೆಗೆ ತಂದು ರೈತರು ಪ್ರತಿಭಟಿಸಿದರು. ಬೆಳಗಾವಿಯ ಅಥಣಿಯಲ್ಲಿ ಮಳೆಯ ನಡುವೆಯೆ ರೈತರು ಪ್ರತಿಭಟನೆ ನಡೆಸಿದರು. ಹಾಸನದಲ್ಲಿ ಅನ್ನದಾತರು ರಸ್ತೆಯಲ್ಲಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಹಲವೆಡೆ ರಸ್ತೆತಡೆ, ಬಸ್ ತಡೆ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯವರು ಬೆಂಗಳೂರಿನಲ್ಲಿ ಮೆರವಣಿಗೆ ರ್ಯಾಲಿ ನಡೆಸಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.

ಬಂದ್ ಹಿನ್ನೆಲೆಯಲ್ಲಿ ಬೆಂಗಳೂರುನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಬೆಳಗಾವಿ ಅಕ್ಕಮಹಾದೇವಿ ವಿವಿಯ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಎಂದಿನಂತೆ ನಡೆಸಲಾಯಿತು.

ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಹಾಸನ, ಬೀದರ್, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಚಿಕ್ಕಮಗಳೂರು, ಶಿವಮೊಗ್ಗ ವಿವಿಧ ಜಿಲ್ಲೆಗಳಲ್ಲಿ ರೈತ ಸಂಘಟನೆಗಳ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ, ಕಾರ್ಮಿಕ ಸಂಘಟನೆ, ಸ್ಥಳೀಯ ಸಂಘಟನೆಗಳು ಸಾಥ್ ನೀಡಿದವು.

ಬೆಂಗಳೂರಿನ ಮೌರ್ಯ ವೃತ್ತದ ಬಳಿ ಬೆಳ್ಳಂಬೆಳ್ಳಗೆ ಪ್ರತಿಭಟನೆ ನಡೆಸಲು ಮುಂದಾದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘಟನೆಯ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್, ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕೃಷಿಕರಿಗೆ ಮಾರಕವಾಗಿರುವ ಈ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ದೆಹಲಿಯಲ್ಲಿ ಕಳೆದ 9 ತಿಂಗಳಿನಿಂದ ರೈತರು ಹೋರಾಟ ಮಾಡುತ್ತಿದ್ದಾರೆ.

ಅವರಿಗೆ ಬೆಂಬಲವಾಗಿ ನಾವು ಶಾಂತಿಯುತ ಹೋರಾಟ ಮಾಡುತ್ತಿದ್ದರೂ ನಮ್ಮನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಮೆಜೆಸ್ಟಿಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡಪರ ಹೋರಾಟಗಾರ, ಶಿವರಾಮೇಗೌಡರನ್ನು ಪೊ ಲೀಸರು ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾ.ರಾ.ಗೋವಿಂದ್, ನ್ಯಾಯಯುತ ಬೇಡಿಕೆಗಾಗಿ ರೈತರು ಮಾಡುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನೈತಿಕ ಬೆಂಬಲ ಘೋಷಣೆಯನ್ನು ಬಿಟ್ಟು ಎಲ್ಲರೂ ಬೀದಿಗಿಳಿದು ಹೋರಾಟ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕಾಗಿದೆ. ಕಳೆದ 9 ತಿಂಗಳಿನಿಂದ ರೈತರು ಬೀದಿಯಲ್ಲಿ ಹೋರಾಟ ಮಾಡುತ್ತಿದ್ದರೂ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಹೋರಾಟದ ಮೂಲಕ ನಾವು ಬಿಸಿ ಮುಟ್ಟಿಸಬೇಕಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಕೆ.ಆರ್.ಪುರ ಮಾರುಕಟ್ಟೆಯಿಂದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು. ಗೋಣಿಚೀಲಗಳನ್ನು ತಲೆಮೇಲೆ ಹೊತ್ತು ವಿನೂತನವಾಗಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಜನರಿಗೆ ಪ್ರತಿಭಟನೆಯ ಉದ್ದೇಶವೇ ಅರ್ಥವಾದಂತಿಲ್ಲ. ಕೇಂದ್ರ ಸರ್ಕಾರ ಎಲ್ಲವನ್ನು ಖಾಸಗಿಕರಣ ಮಾಡಿದೆ. ಕೃಷಿ ವಲಯವನ್ನು ಕೂಡ ಖಾಸಗೀಕರಣ ಮಾಡಲು ಮುಂದಾಗಿದೆ. ಇದನ್ನು ವಿರೋಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಿದರೆ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸುತ್ತೇವೆ. ನವೆಂಬರ್ 26ರಂದು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಇಂದಿನ ಬಂದ್ ಯಶಸ್ವಿಯಾಗಿದೆ. ಗ್ರಾಮೀಣ ಭಾಗದಲ್ಲಿ ನಮ್ಮ ಬಂದ್‍ಗೆ ಸಂಪೂರ್ಣ ಬೆಂಬಲ ಸಿಕ್ಕಿದೆ. ಬೆಂಗಳೂರಿನ ಜನ ನಮಗೆ ಬೆಂಬಲ ನೀಡಿಲ್ಲ. ಮುಂದಿನ ದಿನಗಳಲ್ಲಿ ಇದರ ಉದ್ದೇಶ ಅವರಿಗೆ ಅರ್ಥವಾಗುತ್ತದೆ. ಸರ್ಕಾರ ಜನರು ಇಲ್ಲದಿದ್ದರೂ ಸಾರಿಗೆ ಬಸ್‍ಗಳನ್ನು ಓಡಿಸಿದೆ ಎಂದು ಹೇಳಿದರು.

10 ತಿಂಗಳಿನಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ನೂರಾರು ರೈತರು ಸಾವನ್ನಪ್ಪಿದ್ದಾರೆ. ಆದರೂ ಕೇಂದ್ರ ಯಾವುದೇ ಕ್ರಮ ಕೈಗೊಳ್ಳದೆ ರೈತರ ಮರಣ ಶಾಸನ ಬರೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಹೊಸೂರಿನ ಅತಿಬೆಲೆ ಗಡಿಯಲ್ಲಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಗಡಿ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ರೈತರಿಗೆ ಮಾರಕವಾಗಿರುವ ಕಾಪೆರ್ ಪೊರೇಟ್ ಸಂಸ್ಥೆಗಳಿಗೆ ಪೂರಕವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದರು. ಜನವಾದಿ ಮಹಿಳಾ ಸಂಘಟನೆ, ಕಾರ್ಮಿಕ ಸಂಘಟನೆಗಳವರು, ಕರುನಾಡು ಕನ್ನಡಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಯವರು ಟೌನ್‍ಹಾಲ್ ಬಳಿ ಸಮಾವೇಶಗೊಂಡು ಕೇಂದ್ರದ ಜನ ವಿರೋ ನೀತಿಯನ್ನು ಖಂಡಿಸಿದರು.

ಅತ್ತ ಮೈಸೂರಿನಲ್ಲಿ ಬಂದ್ ನೀರಸವಾಗಿತ್ತು. ರೈತ, ಕಾರ್ಮಿಕ ಸಂಘಟನೆಗಳು, ಮೈಸೂರು ಮಾರುಕಟ್ಟೆ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರದ ಕ್ರಮವನ್ನು ಖಂಡಿಸಿದರು. ಕೋಟೆನಾಡು ಚಿತ್ರದುರ್ಗದಲ್ಲಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ ವೃತ್ತದಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಬೆಣ್ಣೆನಗರಿ ದಾವಣಗೆರೆಯಲ್ಲಿ ರೈತ ಸಂಘಟನೆಗಳು ಬೆಳ್ಳಂಬೆಳ್ಳಗೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದವು. ನಗರದ ಜಯದೇವ ವೃತ್ತದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘದ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕಾಯ್ದೆ , ಬೆಲೆ ಏರಿಕೆ ವಿರೋಸಿ ತುಮಕೂರಿನಲ್ಲೂ ಪ್ರತಿಭಟನೆ ನಡೆಸಲಾಯಿತು. ಬಂದ್ ಪರಿಣಾಮ ಅಷ್ಟಾಗಿ ಬೀರಲಿಲ್ಲ. ಹಾಸನ ನಗರ ಬಸ್ ನಿಲ್ದಾಣದಲ್ಲಿ ಬಸ್ ತಡೆ ಹಾಗೂ ತೆರೆದಿದ್ದ ಅಂಗಡಿಗಳನ್ನು ಪ್ರತಿಭಟನಾಕಾರರು ಬಲವಂತವಾಗಿ ಮುಚ್ಚಿಸುವ ಪ್ರಯತ್ನ ಮಾಡಿದರು. ಹೇಮಾವತಿ ಪ್ರತಿಮೆ ಬಳಿ ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರಿನಲ್ಲಿ ಬಂದ್ ಭಾಗಶಃ ಯಶಸ್ವಿಯಾಗಿತ್ತು.

ಹೆಚ್ಚಿನ ಸಂಘಟನೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಂಗಡಿಮುಂಗಟ್ಟುಗಳು, ಸಂಚಾರ ಎಂದಿನಂತೆ ಇತ್ತು. ಬಿಜೆಪಿ ಹೊರತುಪಡಿಸಿ ವಿವಿಧ ರಾಜಕೀಯ ಪಕ್ಷಗಳು ಇಲ್ಲಿನ ಎಂಜಿರಸ್ತೆಯಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಅಂಗಡಿಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಬಸ್ ಸಂಚಾರ ಎಂದಿನಂತೆಯೇ ಇತ್ತು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಿರಲಿಲ್ಲ. ಹುಬ್ಬಳ್ಳಿ, ಧಾರವಾಡ, ಗುಲ್ಬರ್ಗ, ರಾಯಚೂರು, ಬಳ್ಳಾರಿ, ಬೀದರ್ ಸೇರಿದಂತೆ ಎಲ್ಲೆಡೆ ಬಂದ್ ಪ್ರತಿಭಟನೆಗೆ ಸೀಮಿತವಾಗಿತ್ತು. ಜನಜೀವನ ಎಂದಿನಂತಿತ್ತು.

Facebook Comments