ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಯುಗಳೇ ಇಲ್ಲಿ ಗಮನಿಸಿ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾ.ಜಿಲ್ಲೆ, ಫೆ.25- ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಾ.4ರಿಂದ23 ರವರೆಗೆ ನಡೆಯುವ ದ್ವಿತೀಯ ಪರೀಕ್ಷೆ ಹಿನ್ನೆಲೆಯಲ್ಲಿ, ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಸಹಕರಿಸುವಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರ ಗಮನಕ್ಕೆ ಇಲಾಖೆಯು ಅಗತ್ಯ ಸೂಚನೆಗಳನ್ನು ಪ್ರಕಟಿಸಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಪೋನ್‍ಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಇಲಾಖೆಯ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವುದು. ಪರೀಕ್ಷಾ ಕಾರ್ಯಗಳಿಗೆ ಅಡ್ಡಿ ಉಂಟು ಮಾಡಿದರೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗುವುದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ನಿಷೇಧಿತ ಪ್ರದೇಶವಾಗಿರುತ್ತದೆ.

ಇಲೆಕ್ಟ್ರಾನಿಕ್ ಉಪಕರಣಗಳಾದ ಇ-ಕ್ಯಾಮರಾ, ಲ್ಯಾಪ್‍ಟಾಪ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ. ಅಲ್ಲದೆ ಯಾವುದೇ ರೀತಿಯ ವಿದ್ಯುನ್ಮಾನ ಉಪಕರಣಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುವುದು.  ಪರೀಕ್ಷಾ ಅಕ್ರಮಗಳ ತಡೆಗೆ ಕರ್ನಾಟಕ ರಾಜ್ಯ ಶಿಕ್ಷಣ ಕಾಯ್ದೆ 1983 ತಿದ್ದುಪಡಿ ಕಾಯ್ದೆ 2017ನ್ನು ಜಾರಿಗೆ ತರಲಾಗಿದೆ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದರೆ 5 ವರ್ಷಗಳ ಕಾಲ ಸೆರೆವಾಸ ಶಿಕ್ಷೆ ಅಥವಾ ರೂ.5 ಲಕ್ಷ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು.

ಪರೀಕ್ಷಾರ್ಥಿಗಳು ನಕಲು ಮಾಡುವುದು, ನಕಲು ಮಾಡಲು ಸಹಾಯ ಮಾಡುವುದು, ಬದಲಿ ವ್ಯಕ್ತಿಯಾಗಿ ಪರೀಕ್ಷೆ ಬರೆಯುವುದು, ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ಮೊಬೈಲ್ ಉಪಯೋಗಿಸುವುದು ಪರೀಕ್ಷಾ ಅಕ್ರಮಗಳಾಗಿದ್ದು, ಇಂತಹ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಕ್ರಮ ವಹಿಸಲಾಗುವುದು.

ಕೊಠಡಿ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಅಕ್ರಮ ಎಸಗುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲು ಕ್ರಮವಹಿಸುವುದು. ವಿದ್ಯಾರ್ಥಿಗಳು ಮುಳ್ಳು ಹೊಂದಿರುವ ಸಾಮಾನ್ಯ ಕೈಗಡಿಯಾರವನ್ನು ಧರಿಸಲು ಅನುಮತಿ ನೀಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Facebook Comments