ಬಾಯಿಗೆ ಬಂದಂತೆ ಹೇಳಿಕೆ ನೀಡುವವರಿಗೆ ಪಾಠ ಕಲಿಸುವಂತೆ ರಾಹುಲ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 19-ಕರ್ನಾಟಕದ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿ ಇರಿಸು-ಮುರಿಸು ಉಂಟು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸುವಂತೆ ಎಐಸಿಸಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಟ್ಟುನಿಟ್ಟಿ ನ ಸೂಚನೆ ನೀಡಿದೆ.

ಇತ್ತೀಚಿಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ಮೈತ್ರಿ ಸರ್ಕಾರದ ಬಗ್ಗೆ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಹೈಕಮಾಂಡ್ ಮುಂದಾಗಿದೆ.

ನವದೆಹಲಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕರ್ನಾಟಕದ ಪ್ರಚಲಿತ ವಿದ್ಯಮಾನ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಉಸ್ತುವಾರಿ ವೇಣುಗೋಪಾಲ ಜೊತೆ ಮಹತ್ವದ ಮಾತುಕತೆ ನಡೆಸಿದರು.

ಸುಮಾರು 1ಗಂಟೆಗೂ ಹೆಚ್ಚುಕಾಲ ನಡೆದ ಮಾತುಕತೆಯಲ್ಲಿ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಸ್ಥಿರಗೊಳಿಸುವಂತಹ ಹೇಳಿಕೆಯನ್ನು ನೀಡಲೇ ಬಾರದು, ನಾವು ಮಾಡಿಕೊಂಡಿರುವ ಮೈತ್ರಿ ಐದು ವರ್ಷಗಳ ಕಾಲ ಪೂರ್ಣಗೊಳ್ಳಲು ಸಹಕರಿಸಬೇಕೆಂದು ರಾಹುಲ್ ಗಾಂಧಿ ಸೂಚಿಸಿದ್ದಾರೆ.

ಇತ್ತೀಚೆಗೆ ಕೆಲ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಬಗ್ಗೆ ಹೆಚ್ಚು ಗಮನ ನೀಡಲು ಸಾಧ್ಯವಾಗಿರಲಿಲ್ಲ. ಸರ್ಕಾರ ಭದ್ರವಾಗಿರಬೇಕಾದರೆ ಕೆಲವರ ಬಾಯಿಗೆ ಬೀಗ ಹಾಕಲೆಬೇಕೆಂದು ಸಲಹೆ ಮಾಡಿದ್ದಾರೆ.

ಮೇ 23ರ ಫಲಿತಾಂಶದ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದಿಲ್ಲ. ಪ್ರಾದೇಶಿಕ ಪಕ್ಷಗಳ ಜೊತೆ ನಾವು ಸರ್ಕಾರ ರಚಿಸಲು ಅವಕಾಶವಿದೆ.

ಇಂತಹ ಸಂದರ್ಭದಲ್ಲಿ ನಾವು ಮೈತ್ರಿ ಪಕ್ಷಗಳನ್ನು ಉಳಿಸಿಕೊಳ್ಳಬೇಕೇ ಹೊರತು ಅವರ ವಿರುದ್ಧ ಸಂದೇಹವನ್ನು ವ್ಯಕ್ತಪಡಿಸಬಾರದು. ಇದರಿಂದ ರಾಷ್ಟ್ರ ಮಟ್ಟಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ತಿಳಿ ಹೇಳಿದ್ದಾರೆ.

ಸರ್ಕಾರದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಾದರೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಬೇಕು. ಪ್ರತಿಯೊಂದಕ್ಕೂ ಎಲ್ಲರೂ ಮಾತನಾಡುವುದು ಸರಿಯಲ್ಲ, ಇನ್ನು ಮುಂದೆ ಇದೆಲ್ಲದಕ್ಕೂ ಅಂಕುಶ ಹಾಕುವಂತೆ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin