ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ರಾಹುಲ್ ಗ್ರೀನ್ ಸಿಗ್ನಲ್

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--01ನವದೆಹಲಿ, ಜು.8-ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ನಂತರ ನಿಗಮ ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸಮ್ಮತಿ ಸೂಚಿಸಿದ್ದಾರೆ. ಎಂಟು ವರ್ಷಗಳ ಕಾಲ ದಾಖಲೆ ಅವಧಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜವಾಬ್ದಾರಿ ನಿಭಾಯಿಸಿ ದಾಖಲೆ ಬರೆದ ಡಾ.ಜಿ.ಪರಮೇಶ್ವರ್ ಅವರು ಹೈಕಮಾಂಡ್‍ಗೆ ಕೃತಜ್ಞತೆ ಸಲ್ಲಿಸಲು ನವದೆಹಲಿಗೆ ತೆರಳಿದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿಯವರೊಂದಿಗೆ ನಿನ್ನೆ ರಾತ್ರಿ ಚರ್ಚೆ ನಡೆಸಿದ ಸಂದರ್ಭದಲ್ಲಿ ಅಧಿವೇಶನದ ನಂತರ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರನ್ನು ನೇಮಕ ಮಾಡಿ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದು, ಕಾಂಗ್ರೆಸ್ ಪಾಲಿನ 50 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಚರ್ಚೆ ನಡೆಸಿದ ಸಂದರ್ಭದಲ್ಲಿ ಸಮ್ಮತಿ ಸೂಚಿಸಿದ ರಾಹುಲ್ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರ ಜೊತೆ ಕಾರ್ಯಕರ್ತರಿಗೆ ಅವಕಾಶ ನೀಡಬೇಕು. 50 ನಿಗಮ ಮಂಡಳಿಗಳಲ್ಲಿ 20 ಶಾಸಕರಿಗೆ, 30 ಸ್ಥಾನ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಅಧಿವೇಶನದ ನಂತರ ನಿಗಮ ಮಂಡಳಿಗಳ ನೇಮಕ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ನಂತರ ಸಂಪುಟ ವಿಸ್ತರಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗಿದೆ..

ಅಲ್ಲದೆ, ಎಂಟು ವರ್ಷಗಳ ಸುದೀರ್ಘ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ ಪರಮೇಶ್ವರ್ ಅವರ ಸೇವೆಯನ್ನು ರಾಹುಲ್‍ಗಾಂಧಿಯವರು ಪ್ರಶಂಸಿಸಿದ್ದಾರೆ. ತಾವು ದಕ್ಷ ಹಾಗೂ ಪ್ರಾಮಾಣಿಕವಾಗಿ ಪಕ್ಷವನ್ನು ಮುನ್ನಡೆಸಿದ್ದೀರಿ. ತಮ್ಮ ಅವಧಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿತು. ಹಲವು ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಲು ತಾವು ಮಾಡಿದ ಕೆಲಸವನ್ನು ನಾವು ಮೆಚ್ಚಿದ್ದೇವೆ ಎಂದು ಅವರು ಪರಮೇಶ್ವರ್ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ದಿನೇಶ್‍ಗುಂಡೂರಾವ್ ಅವರು, ಹೊಸದಾಗಿ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನೀವು ಎಂಟು ವರ್ಷ ಅಧ್ಯಕ್ಷರಾಗಿದ್ದವರು ನಿಗಮ ಮಂಡಳಿಗಳ ನೇಮಕ, ಸಂಪುಟ ವಿಸ್ತರಣೆ ಪ್ರಕ್ರಿಯೆ ನಿಮ್ಮ ನೇತೃತ್ವದಲ್ಲಿ ಆಗಲಿ ಎಂದು ರಾಹುಲ್ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಅಧಿವೇಶನ ಮುಗಿಯುತ್ತಿದ್ದಂತೆ ನೀವು ಸಿದ್ದರಾಮಯ್ಯ, ದಿನೇಶ್‍ಗುಂಡೂರಾವ್ ಕುಳಿತು ಚರ್ಚಿಸಿ ತೀರ್ಮಾನ ಮಾಡಿ. ಪಟ್ಟಿಯೊಂದಿಗೆ ದೆಹಲಿಗೆ ಬನ್ನಿ ಎಂದು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin