ಇನ್ನೂ ಮೂರು ದಿನ ಮಳೆ ಮುಂದುವರಿಕೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ. 5- ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.

ವಾತಾವರಣದಲ್ಲಿ ಬದಲಾವಣೆ ಉಂಟಾಗಿದ್ದು, ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಅವರು ಈ ಸಂಜೆಗೆ ತಿಳಿಸಿದರು.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಕಾವೇರಿ ಜಲಾನಯನ ಭಾಗದಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಲಿದೆ ಎಂದರು.
ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಚದುರಿದ ಸಾಧಾರಣ ಮಳೆಯಾಗಲಿರುವ ಮುನ್ಸೂಚೆಯಿದೆ. ಭಾಗಶ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಇಂದು ರಾತ್ರಿಯಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಈಗಾಗಲೇ ಕೊಡಗು ಸೇರಿದಂತೆ ಮಲೆನಾಡಿ ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು, ನದಿಗಳಲ್ಲಿ ನೀರಿನ ಮಟ್ಟವು ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಕಾವೇರಿಕೊಳ್ಳದ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದ ನೀರು ಹರಿದು ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ ಎಂದರು.

Facebook Comments