ಇನ್ನೆರಡು ದಿನ ಮಳೆ ಸಾಧ್ಯತೆ
ಬೆಂಗಳೂರು, ಸೆ.22-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಹಾಗೂ ಉತ್ತಮ ಮಳೆಯಾಗಿರುವ ವರದಿಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ದಕ್ಷಿಣ ಹಾಗೂ ಪೂರ್ವಭಾಗದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸೆ.24ರವರೆಗೂ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ್ರೆಡ್ಡಿ ತಿಳಿಸಿದರು.
ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆ ಇಳಿಮುಖವಾಗಿದ್ದು, ಚದುರಿದಂತೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ವಾತಾವರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿದ್ದು, ಈ ತಿಂಗಳ ಅಂತ್ಯದವರೆಗೂ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಪ್ರಮಾಣ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಿದರು.