ಜೂ.20ರ ನಂತರ ರಾಜ್ಯದಲ್ಲಿ ಮತ್ತಷ್ಟು ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.18-ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜೂ.20ರ ನಂತರ ರಾಜ್ಯದ ಒಳನಾಡಿನಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಕೆಲವೆಡೆ ಚುದರಿದಂತೆ ಸಾಧಾರಣ ಮಳೆಯಾಗಿದೆ. ಒಂದೆರಡು ಕಡೆ ಹೆಚ್ಚಿನ ಮಳೆಯೂ ಆಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವವಿದ್ದು, ಭಾನುವಾರದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ನದಿಗಳು ಹಾಗೂ ಜಲಾಶಯಗಳ ಒಳ ಹರಿವು ಹೆಚ್ಚಾಗುತ್ತಿದೆ ಎಂದರು.

ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಕೆಲವೆಡೆ ಭಾರೀ ಮಳೆಯೂ ಆಗಬಹುದು.ಮುಂಗಾರು ಹಂಗಾಮಿಗೆ ರೈತರು ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಲವು ಕಡೆಗಳಲ್ಲಿ ಬಿತ್ತನೆಗೆ ಪೂರಕವಾಗಿ ಮಳೆಯಾಗುತ್ತಿದೆ ಎಂದು ಹೇಳಿದರು.

ಈ ಬಾರಿಯ ಮುಂಗಾರು ಮಳೆ ವಾಡಿಕೆ ಪ್ರಮಾಣದಲ್ಲಾಗುವ ಮುನ್ಸೂಚನೆ ಇರುವುದರಿಂದ ಮಳೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಭಾರೀ ಮಳೆ ಹಾಗೂ ಪ್ರವಾಹದ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾಡಳಿತಗಳಿಗೆ ಸಲಹೆ ಮಾಡಲಾಗಿದೆ ಎಂದರು.

Facebook Comments